ಶೀಘ್ರವೇ ಕೇಂದ್ರ ಸರ್ಕಾರ ಪತನವಾಗಲಿದೆ: ಸಚಿವ ಸಂತೋಷ್​ ಲಾಡ್

ವಿಜಯವಾಣಿ - 2024-09-10T125252.114
Published on

ಹುಬ್ಬಳ್ಳಿ: ಮುಂದಿರುವ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಪತನವಾಗುವ ಸಾಧ್ಯತೆಗಳಿವೆಯೇ ಹೊರತು ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಅಲ್ಲ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ಹೇಳಿದ್ದಾರೆ.

ಇಂದು (ಸೆ.10) ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಾಡ್​, "ಚುನಾವಣೆ ಘೋಷಣೆಯಾಗಿರುವ ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ನೋಡಲಿದೆ. ಮುಂಬರುವ ಮಹಾರಾಷ್ಟ್ರ ಹಾಗೂ ಬಿಹಾರ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಲು ವಿಫಲವಾಗಬಹುದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿಯವರು ಹೇಳಿಕೊಂಡು ಬರುತ್ತಲೇ ಇದ್ದಾರೆ. ಅವರದ್ದು ಬರೀ ಅದೇ ಕೆಲಸ" ಎಂದರು.

"ನಾವು 136 ಶಾಸಕರಿದ್ದೇವೆ. ಯಾವದೇ ಕಾರಣಕ್ಕೂ ಸರ್ಕಾರ ಬೀಳುವ ಪ್ರಶ್ನೆಯೇ ಇಲ್ಲ. ನಾನು ಮುಖ್ಯಮಂತ್ರಿಯಾಗಬಲ್ಲೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳು ಅವರ ವೈಯಕ್ತಿಕ. ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯುತ್ತಾರೆ" ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net