ವಿಧಾನಸೌಧ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ|Permanent lighting

l (2)
Published on

ಬೆಂಗಳೂರು: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು ಸಾರ್ಥಕಗೊಳಿಸುವ ರೀತಿಯಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಿ ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹೇಳಿದರು.

ವಿಧಾನಸೌಧದ ಶಾಶ್ವತ ವಿದ್ಯುತ್ ದೀಪಾಲಂಕಾರ ಲೋಕಾರ್ಪಣೆ(Vidhana Soudha drive for permanent electric lighting) ಗೊಳಿಸಿ ಮಾತನಾಡಿದರು.

ಪಾರ್ಲಿಮೆಂಟ್ ಮತ್ತು ವಿಧಾನಸೌಧಗಳು ದೇಶ ಹಾಗೂ ರಾಜ್ಯದ ಜನರ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಅಸಮಾನತೆಯನ್ನು ಇನ್ನೂ ತೊಡೆದುಹಾಕಲು ಸಾಧ್ಯವಾಗಿಲ್ಲ. ವಿಧಾನಸೌಧ, ಸುವರ್ಣಸೌಧ, ವಿಕಾಸಸೌಧದಲ್ಲಿ ಕುಳಿತು ಸಮಸಮಾಜ ರೂಪಿಸುವ ದಿಕ್ಕಿನಲ್ಲಿ ಶ್ರಮಿಸಬೇಕು. ಕಾನೂನು ಸುವ್ಯವಸ್ಥೆ ಸುಗಮ ವಾಗಿರಬೇಕಾದರೆ ಅಸಮಾನತೆ ಅಳಿಯಬೇಕು ಎಂದು ತಿಳಿಸಿದರು.

ಜನರ ಕೆಲಸ ಮಾಡಲು ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ. ಈ ಉದ್ದೇಶಕ್ಕಾಗಿ ವಿಧಾನಸೌಧ ಕಟ್ಟಿಸಲಾಗಿದೆ. ಈ ಉದ್ದೇಶ ಈಡೇರಿಸಿ ಜನರ ಸಮಸ್ಯೆ ಬಗೆಹರಿಸುವ ಶಕ್ತಿ ನಮಗೆ ಬರಲಿ, ರಾಜ್ಯದ ಜನತೆಗೂ ಆರ್ಥಿಕ ಶಕ್ತಿ ತರಲು ಯತ್ನಿಸೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ಕಾರ್ಯಗತ ಮಾಡಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಅಭಿನಂದಿಸಿದರು.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ವಿಧಾನಸೌಧ ನಮ್ಮ ಸೌಭಾಗ್ಯ. ಜನರಿಗೆ ಇದನ್ನು ವೀಕ್ಷಣೆ ಮಾಡಲು ಪ್ರತಿ ಶನಿವಾರ, ಭಾನುವಾರ ಅವಕಾಶ ಮಾಡಿಕೊಡುವ ಆಲೋಚನೆ ಇದೆ ಎಂದರು.

ರಾಷ್ಟ್ರೀಯ ಹಬ್ಬ ಹರಿದಿನಗಳಲ್ಲಿ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಲಾಗುತ್ತಿತ್ತು. ಅದರಿಂದ ಹೆಚ್ಚು ಖರ್ಚು ಬರುತ್ತಿತ್ತು. ಈ ಖರ್ಚು ಕಡಿಮೆ ಮಾಡಲು ಹಾಗೂ ವಿಧಾನಸೌಧದ ಆಕರ್ಷಣೆಯನ್ನು ಶಾಶ್ವತವಾಗಿ ಹೆಚ್ಚಿಸಲು ಹಾಗೂ ಜನರನ್ನು ಆಕರ್ಷಿಸಲು ಶಾಶ್ವತ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಕಾನೂನು ಸಚಿವ ಎಚ್.ಕೆ.ಪಾಟೀಲ ಮಾತನಾಡಿ, 22 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೇ ವಿಧಾನಸೌಧದ ಮೂಲಕ 1 ಕೋಟಿಗೂ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆ ಎತ್ತಿದೆ. ಕರ್ನಾಟಕದಲ್ಲಿ ಬಡತನವನ್ನು ಬೇರು ಸಮೇತ ಕಿತ್ತು ಹಾಕುವ ಕೆಲಸ ಮಾಡಲಾಗಿದೆ. ಬಡತನ ನಿರ್ಮೂಲನೆ ಮಾಡುವ ಮೂಲಕ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಿ ಶಕ್ತಿಸೌಧಕ್ಕೆ ಅರ್ಥ ತಂದುಕೊಡಲಾಗಿದೆ ಎಂದು ಹೇಳಿದರು.

ಸೋಲಾರ್ ವ್ಯವಸ್ಥೆ ಕಲ್ಪಿಸಲು ಮನವಿ

ವಿಧಾನಸೌಧ ತನ್ನದೇ ಶಕ್ತಿ ಇದೆ. ಕನ್ನಡವನ್ನು ಉಳಿಸಿ, ಬೆಳೆಸಿದೆ. ಸರ್ವ ಜನಾಂಗ ಶಾಂತಿಯತೋಟ ಮಾಡಲು ಶ್ರಮಿಸಿದೆ. ಈ ಸೌಧಕ್ಕೆ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಸೋಲಾರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಇಂಧನ ಸಚಿವರಲ್ಲಿ ಮನವಿ ಮಾಡಿದರು.

ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರಿನ ಪಾರಂಪರಿಕ ಕಟ್ಟಡಗಳು, ಮೆಟ್ರೋ ಪಿಲ್ಲರ್‌ಗಳು ಸೇರಿದಂತೆ 40 ಕಟ್ಟಡಗಳನ್ನು ಗುರುತಿಸಲಾಗಿದೆ. ಸದ್ಯದಲ್ಲೇ ಅವುಗಳಿಗೆ ಹೊಸ ರೂಪ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ಸ್ಪೀಕರ್ ಖಾದರ್ ಅವರು ವಿಧಾನಸೌಧಕ್ಕೆ ಹೊಸ ರೂಪ ನೀಡಿದ್ದಾರೆ.

-ಡಿ.ಕೆ.ಶಿವಕುಮಾರ್, ಡಿಸಿಎಂ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net