ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಹುಟ್ಟುಹಬ್ಬಕ್ಕೆ ಅನುಮತಿ ಇಲ್ಲ :  ಡಿಸಿಗೆ ನಿರ್ದೇಶಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

highcourt
Published on

ಬೆಂಗಳೂರು: ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ಸೆ.18ರಂದು ಇಡೀ ದಿನ ನಟ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಡಾ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಹಾಗೂ ವಿಎಸ್‌ಎಸ್ ವಿಷ್ಣು ಸೇನಾ ಸಂಘಟನೆ ಅಧ್ಯಕ್ಷ ತಿಮ್ಮರಾಜು ಎಂಬುವರು ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಅಭಿಮಾನ್ ಸ್ಟುಡಿಯೋ ಹಾಗೂ ರಾಜ್ಯ ಸರ್ಕಾರದ ನಡುವಿನ ಮಾಲೀಕತ್ವ ವ್ಯಾಜ್ಯದಲ್ಲಿ ವಿಶೇಷ ಜಿಲ್ಲಾಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಿ ಈಗಾಗಲೇ 2025ರ ಜ.13ರಂದು ನ್ಯಾಯಾಲಯ ಆದೇಶ ಹೊರಡಿಸಿದೆ. ಹಾಗಾಗಿ, ಪುನಃ ಬೇರೆ ರೀತಿಯ ಆದೇಶ ನೀಡಲು ಸಾಧ್ಯವಿಲ್ಲ. ಆದ್ದರಿಂದ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ತಿರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ಹೇಳಿದೆ.

ಅಲ್ಲದೆ, ಅರ್ಜಿ ಸಂಬಂಧ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ನಗರ ಜಿಲ್ಲಾಧಿಕಾರಿ, ಬೆಂಗಳೂರು ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್, ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ, ಅಭಿಮಾನ್ ಸ್ಟುಡಿಯೋದ ಬಿ.ಎಸ್. ಕಾರ್ತಿಕ್ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net