

ಬೆಂಗಳೂರು: ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವ ಮಹತ್ವಾಕಾಂಕ್ಷಿ ವೃಷಭಾವತಿ ಏತ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಸೂಚನೆ ನೀಡಿದರು.
ವೃಷಭಾವತಿ ಏತ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಯಂಡಹಳ್ಳಿ ಎಸ್‌ಟಿಪಿ, ಹುಸ್ಕೂರು ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ ಪೈಪ್‌ಲೈನ್ ಕಾಮಗಾರಿ, ಗೊಲ್ಲಹಳ್ಳಿ ಪೈಪ್‌ಯಾರ್ಡ್ ಮತ್ತು ಮಾಕಳಿ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದರು.
ಬಯಲು ಸೀಮೆಯ ಜಿಲ್ಲೆಗಳಲ್ಲಿ ಅಂತರ್ಜಲ ಹೆಚ್ಚಳಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಯೋಜಿಸಲಾಗಿರುವ ಮಹತ್ವಕಾಂಕ್ಷಿ ಯೋಜನೆ ಇದಾಗಿದೆ. ಮಾರ್ಚ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಚಾಲನೆ ನೀಡಿದ್ದರು. ಈ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಕೆರೆಗಳಿಗೆ ಸಂಪರ್ಕ ಸಾಧಿಸುವ ಕಡೆಗಳಲ್ಲಿ ರಸ್ತೆಗಳನ್ನು ನಿರ್ಮಿಸಬೇಕು ಎಂದು ಸೂಚನೆ ನೀಡಿದರು.
ಈ ಯೋಜನೆಯ ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಜಾಕ್‌ವೆಲ್, ಪೈಪ್‌ಲೈನ್‌ಗಳ ಗುಣಮಟ್ಟದ ಬಗ್ಗೆಯೂ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು. ಇಲಾಖೆಯ ಕಾರ್ಯದರ್ಶಿಗಳಾದ ರಾಘವನ್, ಕಾರ್ಯಪಾಲಕ ಇಂಜಿನೀಯರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.