ರಾಜ್ಯಕ್ಕೆ ಈಗಾಗಲೇ ಮುಂಗಾರು (ಮಾನ್ಸೂನ್) ಮಾರುತಗಳು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಚಟುವಟಿಕೆಗಳು ಚುರುಕುಗೊಂಡಿವೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರದ ಸುತ್ತಮುತ್ತಲಿನ ಭಾಗಗಳಲ್ಲಿ ಸದ್ಯ ಬಿಟ್ಟು ಬಿಟ್ಟು ಉತ್ತಮ ಮಳೆಯಾಗುತ್ತಿದ್ದು, ಜೂನ್ 8ರಿಂದ ಜೂನ್ 13ರ ಅವಧಿಯಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗ್ಗಿನ ಅವಧಿಯಲ್ಲಿ ಸುರಿದ ಭಾರೀ ಮಳೆಗೆ ನಗರದ ಹೃದಯಭಾಗವಾದ ಕೋಡಿಯಾಲ್‌ಬೈಲ್ ರಸ್ತೆ ಬಹುತೇಕ ಕಡೆ ಸಂಪೂರ್ಣ ಜಲಾವೃತಗೊಂಡಿತು. ಕರಂಗಲ್‌ಪಾಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚರಂಡಿಗಳ ಹೂಳೆತ್ತದ ಕಾರಣ, ಮಳೆನೀರು ಸರಾಗವಾಗಿ ಹರಿದುಹೋಗದೆ ರಸ್ತೆಗೆ ನುಗ್ಗಿದೆ. ಇದರಿಂದಾಗಿ ಪಾದಚಾರಿಗಳು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುವಂತಾಯಿತು. ನಿರಂತರ ಮಳೆಯ ಹೊಡೆತಕ್ಕೆ ದಂಬೇಲ್ ಸಮೀಪ ಮನೆಯೊಂದರ ತಡೆಗೋಡೆ ರಸ್ತೆಗೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ನಂತೂರು, ಪಡೀಲ್, ಪಂಪ್‌ವೇಲ್ ಹಾಗೂ ಕೆಪಿಟಿ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ರಸ್ತೆಯಲ್ಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.