ವಯನಾಡು ಭೂ ಕುಸಿತ : ಕರ್ನಾಟಕದಿಂದ ಅಗತ್ಯ ನೆರವಿನ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

CM Siddaramaiah
Published on

ಮೈಸೂರು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಭೂ ಕುಸಿತದಿಂದ ಉಂಟಾಗಿರುವ ವಿಪತ್ತಿನ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಕರ್ನಾಟಕ ಸರ್ಕಾರವು ತ್ವರಿತವಾಗಿ ಎಲ್ಲ ರೀತಿಯ ಸಹಕಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದಕ್ಕಾಗಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿ, ಗಡಿಭಾಗದ ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ತಂಡಗಳನ್ನು ಕಳುಹಿಸಿ, ಅಗತ್ಯ ವೈದ್ಯಕೀಯ ಸೌಕರ್ಯಗಳ ಏರ್ಪಾಡು ಕೂಡ ಮಾಡಿಕೊಳ್ಳಲಾಗಿದೆ.

ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು, ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್‌ಡಿಆರ್‌ಎಫ್ ತಂಡ ಹಾಗೂ ಭಾರತೀಯ ಸೇನೆಯ ಮದ್ರಾಸ್ ಎಂಜಿನಿಯರ್ ಗ್ರೂಪ್‌ನ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಸೂಚಿಸಿದ್ದಾರೆ.

ಎಂಇಜಿಯ ಒಬ್ಬರು ಅಧಿಕಾರಿ, ಇಬ್ಬರು ಜೆಸಿಒಗಳು ಹಾಗೂ 70 ವಿವಿಧ ಶ್ರೇಣಿಗಳ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆಸಿಒಗಳು ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡಿಪುರ ಚೆಕ್‌ಪೋಸ್ಟ್‌ನಲ್ಲಿ ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್ ಕಾರಿಡಾರ್ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ. ವಯನಾಡಿನಲ್ಲಿ ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಹಾಗೂ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಕೈಗೊಳ್ಳುತ್ತಿದೆ. ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್ ಅಧಿಕಾರಿ ಪಿ.ಸಿ. ಜಾಫರ್ (ಮೊ:9448355577) ಹಾಗೂ ದಿಲೀಶ್ ಶಶಿ (ಮೊ:9446000514) ಅವರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕನ್ನಡಿಗರ ರಕ್ಷಣೆಗೆ ಪ್ರಯತ್ನ : ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಾಗೂ ಸುತ್ತಲಿನ ಪ್ರದೇಶಗಳ ಅಸಂಘಟಿತ ಕಾರ್ಮಿಕರು ಅಲ್ಲಿಗೆ ನಿಯಮಿತವಾಗಿ ಕೆಲಸಕ್ಕಾಗಿ ತೆರಳಿರುವ ಸಾಧ್ಯತೆ ಇರುವುದರಿಂದ ಅಂತಹವರು ಕಣ್ಮರೆಯಾಗಿದ್ದಾರೆ. ಅವರು ಸಂಬಂಧಿಕರು,ಪರಿಚಿತರು ಮಾಹಿತಿ ನೀಡಲು ಚಾಮರಾಜನಗರ ಜಿಲ್ಲಾಡಳಿತವು 24/7 ಸಹಾಯವಾಣಿ ಸ್ಥಾಪಿಸಿದೆ. ಸಹಾಯವಾಣಿ ಸಂಖ್ಯೆಗಳು- 08226-223161,223163,223160 ಅಥವಾ ವಾಟ್ಸಪ್ ಸಂಖ್ಯೆ 9740942902 ಮೂಲಕ ಸಾರ್ವಜನಿಕರು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮಾರ್ಗ ಸ್ಥಗಿತ: ಗುಂಡ್ಲುಪೇಟೆ ಮಾರ್ಗವಾಗಿ ಸಾಗುವ ಬೆಂಗಳೂರು-ವೈಯನಾಡು ರಾಷ್ಟ್ರೀಯ ಹೆದ್ದಾರಿ 766 ರ ಮಾರ್ಗದಲ್ಲಿ ಸಂಚಾರ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧಿಸಲಾಗಿದ್ದು. ಪರ್ಯಾಯವಾಗಿ ಗುಂಡ್ಲುಪೇಟೆ-ಬಂಡೀಪುರ-ಗುಡಲೂರ ಮಾರ್ಗದಲ್ಲಿ ತೆರಳಲು ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net