ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ಸ್ವಾಗತ

Published on

ಪಿರಿಯಾಪಟ್ಟಣ: ಬಿಜೆಪಿ ರಾಜ್ಯ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕಗೊಂಡಿರುವುದಕ್ಕೆ ತಾಲೂಕು ಬಿಜೆಪಿ ಘಟಕದ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಬಿಜೆಪಿಯ ಸಾರಥ್ಯ ವಹಿಸಿರುವುದು ರಾಜ್ಯದಲ್ಲಿ ಬಿಜೆಪಿ ಪಕ್ಷದ ಬಲವರ್ಧನೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಘಟನಾ ಚತುರರಾಗಿರುವ ಬಿ.ವೈ.ವಿಜಯೇಂದ್ರ ಈ ಹಿಂದೆ ಪಕ್ಷ ವಹಿಸಿದ್ದ ಹಲವು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದು, ಈ ಹಿಂದಿನ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಉಪಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಅಭೂತಪೂರ್ವ ಗೆಲುವೇ ಇದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ವಿಜಯಿಯಾಗುವಂತೆ ಮಾಡುವಲ್ಲಿ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಮತ್ತೊಮ್ಮೆ ಗೆಲ್ಲಿಸುವಲ್ಲಿ ಬಿ.ವೈ.ವಿಜಯೇಂದ್ರ ಯಶಸ್ವಿಯಾಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net