ಮಲಹೊರುವ ಪದ್ಧತಿ ನಿಷೇಧ ಕಾಯ್ದೆಯಡಿ ಕೈಗೊಂಡ ಕ್ರಮಗಳೇನು? : ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿದ ಹೈಕೋರ್ಟ್

highcourt
Published on

ಬೆಂಗಳೂರು: ಮಲಹೊರುವ ಜಾಡಮಾಲಿಗಳ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013ರ ಅಡಿಯಲ್ಲಿರುವ ನಿಯಮದ ಅನುಸಾರ ಕೈಗೊಂಡಿರುವ ಕ್ರಮಗಳ ಕುರಿತಂತೆ ಜು.9ರಂದು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ನಿಷೇಧದ ಹೊರತಾಗಿ ಮಲ ಹೊರುವ ಪದ್ಧತಿ ಜಾರಿಯಲ್ಲಿರುವ ಕುರಿತು ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಅರ್ಜಿ ಮತ್ತು ಅಲ್ ಇಂಡಿಯನ್ ಸೆಂಟ್ರಲ್ ಕೌನ್ಸಿಲ್ ಟ್ರೇಡ್ ಯೂನಿಯನ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರೊಬ್ಬರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲೆ ಜಯನಾ ಕೊಠಾರಿ, ರಾಜ್ಯ ಸರ್ಕಾರ ಕಾಯ್ದೆಯಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಅನುಷ್ಠಾನ ಮಾಡುವಲ್ಲಿ ವಿಫಲವಾಗಿದೆ. ಕಾಯ್ದೆಯ ಸೆಕ್ಷನ್ 26ರ ಪ್ರಕಾರ ವರ್ಷಕ್ಕೆ ಎರಡು ರಾಜ್ಯ ಮಟ್ಟದ ಸಭೆಗಳನ್ನು ಆಯೋಜನೆ ಮಾಡಿ, ಕಾಯ್ದೆಯಲ್ಲಿನ ನಿಯಮಗಳನ್ನು ಜಾರಿ ಮಾಡುವ ಕುರಿತಂತೆ ಪರಿಶೀಲನೆ ನಡೆಸಬೇಕು ಎಂಬುದಾಗಿ ತಿಳಿಸಲಾಗಿದೆ. ಆದರೆ, ಕಳೆದ ವರ್ಷದಿಂದ ಕೇವಲ ಒಂದು ಸಭೆ ಮಾತ್ರ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಆರು ತಿಂಗಳು ಕಳೆದರೂ ಒಂದು ಸಭೆಯನ್ನೂ ನಡೆಸಿಲ್ಲ ಎನ್ನುವುದನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಜತೆಗೆ ಸಾಮಾನ್ಯವಾಗಿ ರಾಜ್ಯ ಮಟ್ಟದ ಸಭೆಗಳನ್ನು ಜನವರಿ ಮತ್ತು ಜುಲೈ ತಿಂಗಳಲ್ಲಿ ನಡೆಸುವುದು ರೂಢಿಈ ಸಭೆಗಳು ಶಾಸನ ಬದ್ಧವಾಗಿದ್ದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಬೇಕಾಗಿದ್ದು, ಕಾಯ್ದೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿವಿಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ವರದಿಯನ್ನು ಮಾಡಬೇಕಾಗಿದೆ ಎಂದು ಅವರು ಪೀಠಕ್ಕೆ ತಿಳಿಸಿದರು.

ಈ ವೇಳೆ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಸಭೆ ನಡೆಸಲು ಸಾಧ್ಯವಾಗಲಿಲ್ಲ. ಆದರೆ, ಶ್ರೀಘ್ರವಾಗಿ ಸಭೆ ನಡೆಸಲು ಕಾಲಾವಕಾಶ ಕೋರಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net