ಮಹಾರಾಷ್ಟ್ರ ಚುನಾವಣೆಗೆ ಸದ್ಯಕ್ಕಿಲ್ಲ ಮುಹೂರ್ತ.. ಈ ಬಗ್ಗೆ ಚುನಾವಣಾ ಆಯೋಗ ಹೇಳಿದ್ದೇನು..?

Untitled-design-2024-08-16T185740.734
Published on

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಶುಕ್ರವಾರ(ಆಗಸ್ಟ್​​ 16) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ಕಳೆದ ಬಾರಿ ಹರಿಯಾಣ, ಮಹಾರಾಷ್ಟ್ರ ಎರಡೂ ರಾಜ್ಯಗಳಿಗೂ ಒಂದೇ ಬಾರಿಗೆ ಚುನಾವಣೆ ನಡೆಸಿದ್ದ ಆಯೋಗ ಈ ಬಾರಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿಲ್ಲ.

ಮಹಾರಾಷ್ಟ್ರ ಚುನಾವಣೆಯ ಬಗ್ಗೆ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್​​ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭದ್ರತೆಯ ಅಗತ್ಯತೆ ಸೇರಿದಂತೆ ಹಲವು ಕಾರಣಗಳಿಂದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ನಂತರ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. ಅದರ ಜತೆಗೆ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮತದಾರರ ಪಟ್ಟಿಯನ್ನು ನವೀಕರಿಸುವಲ್ಲಿ ವಿಳಂಬವಾಗಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ಪ್ರಸ್ತುತ ಪಿತೃಪಕ್ಷ, ಗಣೇಶ ಚತುರ್ಥಿ, ದೀಪಾವಳಿ ಸೇರಿದಂತೆ ಪ್ರಮುಖ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಹೀಗಾಗಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಮುಂದೂಡುವ ಅವಶ್ಯಕತೆಯಿದೆ ಎಂದು ಅವರು ವಿವರಿಸಿದರು.

ಕಳೆದ ಬಾರಿ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾಣೆಯಗಳು ಒಟ್ಟಿಗೆ ನಡೆದಿದ್ದವು. ಆದರೆ ಈ ಬಾರಿ ಜಮ್ಮು-ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಹೆಚ್ಚುವರಿ ಭದ್ರತಾ ಪಡೆಗಳ ಅಗತ್ಯವಿದೆ. ಹೀಗಾಗಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಎರಡು ರಾಜ್ಯಗಳ ಚುನಾವಣೆ ಮುಗಿದ ಬಳಿಕ ನಡೆಸಲಾಗುವುದು ಎಂದು ಚುನಾವಣಾ ಆಯೋಗದ ಮುಖ್ಯಸ್ಥರು ಹೇಳಿದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸದಿರುವ ಚುನಾವಣಾ ಆಯೋಗದ ವಿರುದ್ಧ ಮಾಜಿ ಸಚಿವ ಹಾಗೂ ಯುಬಿಟಿ ನಾಯಕ ಆದಿತ್ಯ ಠಾಕ್ರೆ ಕಿಡಿಕಾರಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣೆಯನ್ನು ನಡೆಸಲು ಇನ್ನೂ ಬಾಸ್ ಅನುಮತಿ ನೀಡುತ್ತಿಲ್ಲ ಎಂದು ಭಾವಿಸಿದ್ದೇನೆ. ಮಹಾರಾಷ್ಟ್ರವನ್ನು ಬಿಜೆಪಿ ಲೂಟಿ ಮಾಡುತ್ತಿದೆ. ಆ ಪಕ್ಷದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಇದೀಗ ಚುನಾವಣಾ ಆಯೋಗವು ಅವಕಾಶ ಮಾಡಿಕೊಟ್ಟಿದೆ. ಮಹಾರಾಷ್ಟ್ರದ ಮತದಾರರು ಒಂದು ಬಾರಿ ಬಿಜೆಪಿ ಪಕ್ಷವನ್ನು ತಿರಸ್ಕರಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ರಾಜ್ಯದ ಜನ ಭಾರತೀಯ ಜನತಾ ಪಕ್ಷವನ್ನು ತಿರಸ್ಕರಿಸುತ್ತಾರೆ ಎಂದು ಮಾಜಿ ಸಚಿವ ಆದಿತ್ಯ ಠಾಕ್ರೆ ವಾಗ್ದಾಳಿ ನಡೆಸಿದರು.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net