

ಕೋಲಾರ: ಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನತೆ ಆಶೀರ್ವಾದ ಮಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವಿಶ್ವಾಸವ್ಯಕ್ತಪಡಿಸಿದರು.
ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡಮಲೆ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ, ಗ್ಯಾರೆಂಟಿಗಳ ಬಗ್ಗೆ ಪ್ರಶ್ನೆ ಮಾಡುವ ನೈತಿಕತೆ ಜೆಡಿಎಸ್, ಬಿಜೆಪಿನವರಿಗಿಲ್ಲ ಎಂದರು.
ಪದೇ ಪದೇ ಎಚ್.ಡಿ.ಕುಮಾರ ಸ್ವಾಮಿ ಅವರು ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಾರೆ, ಅವರಿಗೆ ನೈತಿಕತೆಯಿಲ್ಲ, ಈಗಾಗಲೇ ಒಂದು ಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ, ಈ ಚುನಾವಣೆಯಲ್ಲಿ ಬುದ್ದಿ ಕಲಿಸುವುದು ಗ್ಯಾರೆಂಟಿ ಎಂದರು.
ಚುನಾವಣೆಯ ಸಂದರ್ಭದಲ್ಲಿ ಮುಖಂಡರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುವುದು ಸಹಜ, ಆದರೆ ಅಭ್ಯರ್ಥಿ ಹೆಸರು ಅಂತಿಮಗೊಂಡ ನಂತರ ಭಿನ್ನಾಭಿಪ್ರಾಯಗಳು ಶಮನಗೊಂಡಿದೆ. ಯಾವುದೇ ರೀತಿ ಗುಂಪುಗಾರಿಕೆಯಿಲ್ಲ, ಎಲ್ಲಾ ಮುಖಂಡರು ಒಗ್ಗಟ್ಟಾಗಿದ್ದಾರೆ ಎಂದು ತಿಳಿಸಿದರು.
ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕ್ಷೇತ್ರದ ಮತದಾರರು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.