ಯಾರ ಅನುಮತಿ ಪಡೆದು ಎಸ್‌ಐಟಿ ರಚನೆ? ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಆಕ್ರೋಶ

highcourt
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಭೂಮಿ ಅತಿಕ್ರಮಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಾರ ಅನುಮತಿ ಪಡೆದು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದೆ? ಆರೋಪಿಗಳೆಲ್ಲರನ್ನೂ ಬ್ರೈನ್ ಮ್ಯಾಪಿಂಗ್‌ಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರಬರಲಿದೆ ಎಂದು ಹೈಕೋರ್ಟ್ ಸೋಮವಾರ ಮೌಖಿಕವಾಗಿ ಆಕ್ರೋಶ ವ್ಯಕ್ತಪಡಿಸಿತು.

ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಆದೇಶ ಮಾಡಿರುವುದನ್ನು ಜಾರಿ ಮಾಡುವಂತೆ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಜಾರಿ ಮಾಡಲು ವಿಫಲವಾಗಿರುವ ರಾಜ್ಯ ಸರ್ಕಾರದ ನಡೆ ಪ್ರಶ್ನಿಸಿ ಎಸ್.ಆರ್.ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಟಿ.ವೆಂಕಟೇಶ್ ನಾಯ್ಕ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠವು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಎಸ್‌ಐಟಿ ರಚಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ಸಂಬಂಧ ವಿವರಣೆ ನೀಡಲು ಮುಂದಿನ ವಿಚಾರಣೆಗೆ ರಾಜೇಂದ್ರ ಕಠಾರಿಯಾ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಬೇಕು. ಮೇಲ್ನೋಟಕ್ಕೆ ಅರೋಪಿಗಳ ವಿರುದ್ಧ ಮುಂದುವರಿಯಲು ದಾಖಲೆಗಳು ಇವೆ. ಆರೋಪ ನಿಗದಿಗೂ ಮುನ್ನ ವಾದ ಆಲಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಹೇಳಿ, ವಿಚಾರಣೆಯನ್ನು ಮಾರ್ಚ್ 19ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಪೀಠವು, ಎಸ್‌ಐಟಿ ರಚಿಸಬೇಕು ಎಂದು ನ್ಯಾಯಾಲಯ ಹೇಳಿತ್ತೇ? ಕಂದಾಯ ಇಲಾಖೆಯು ಎಸ್‌ಐಟಿ ರಚಿಸುವಷ್ಟು ಶಕ್ತಿಶಾಲಿಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 71 ಎಕರೆ ಒತ್ತುವರಿಯಾಗಿರುವ ಭೂಮಿಯನ್ನು ತೆರವುಗೊಳಿಸಬೇಕಿದೆ. ಯಾವ ರೀತಿಯಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ? ಎಷ್ಟು ಎಕರೆ ತೆರವು ಮಾಡಲಾಗಿದೆ? ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಬೇಕು, ಇಲ್ಲವೇ ಆರೋಪಿಗಳನ್ನು ಜೈಲಿಗೆ ಹಾಕಬೇಕು ಎಂದು ಎಚ್ಚರಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net