ಚಾಲಕನ ನಿರ್ಲಕ್ಷ್ಯದಿಂದಾಗಿ ಪಲ್ಟಿ ಹೊಡೆದ ಬಸ್; ಮಹಿಳೆ ಸಜೀವದಹನ

Fire Accident
Published on

ಹೈದರಾಬಾದ್: ಚಾಲಕನ ನಿರ್ಲಕ್ಷ್ಯದಿಂದಾಗಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಮಹಿಳಾ ಪ್ರಯಾಣಿಕರೊಬ್ಬರು ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ನಡೆದಿದೆ.

ತೆಲಂಗಾಣದ ರಾಜಧಾನಿ ಹೈದರಾಬಾದಿನಿಂದ ಆಂಧ್ರಪ್ರದೇಶದ ಚಿತ್ತೂರಿನತ್ತ ಬಸ್ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಶನಿವಾರ ಮುಂಜಾನೆ 03 ಘಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಘಟನೆ ನಡೆದ ವೇಳೆ ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ವಾಹನ ಚಾಲನೆ ವೇಳೆ ಚಾಲಕ ನಿದ್ರೆಗೆ ಜಾರಿದ ಪರಿಣಾಮ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಕೂಡಲೇ ಪ್ರಯಾಣಿಕರೆಲ್ಲರೂ ಕೆಳಗಿಳಿದಿದ್ದು, ಮಹಿಳೆಯೊಬ್ಬರು ಹೊರಬರಲಾರದೆ ಸಜೀವ ದಹನವಾಗಿದ್ದಾರೆ. ಮೃತಪಟ್ಟ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಅಜಾಗರೂಕತೆಯಿಂದ ಚಾಲನೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net