

ಬಾಗಲಕೋಟೆ: ಮೂವತ್ತು ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಬಾದಾಮಿಯಲ್ಲಿ ನಡೆದ ಈ ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಾಳಾಪುರ ತಾಂಡಾ ನಿವಾಸಿ ವೆಂಕುಬಾಯಿ ರಾಮಣ್ಣ ಚವ್ಹಾಣ (35) ಸಾವಿಗೀಡಾಗಿದ್ದಾರೆ. ಈಕೆ ತನ್ನ ಪತಿ ಹಾಗೂ ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗುವಾಗ ಈ ಅಪಘಾತ ಸಂಭವಿಸಿದೆ.
ಬಾದಾಮಿಯಿಂದ ಕೆರೂರು ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಪಾಟಾ ಕಟ್ ಆಗಿ ನಿಯಂತ್ರಣ ತಪ್ಪಿ ವೆಂಕುಬಾಯಿ ಅವರ ಮೈಮೇಲೆ ಸಾಗಿಹೋಗಿದೆ. ಅದೃಷ್ಟವಶಾತ್ ಇವರ ಪತಿ ಹಾಗೂ ಮಗು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ವೆಂಕುಬಾಯಿ ಹಾಗೂ ಕುಟುಂಬ ಬಾದಾಮಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬಸ್ನಲ್ಲಿ ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.