

ಶಿವಮೊಗ್ಗ: ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಹಾಗೂ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಮಹಿಳಾ ಉದ್ಯಮಿಗಳಿಗೆ ಸೂಕ್ತ ಪ್ರೋತ್ಸಾಹ ಅಗತ್ಯ ಎಂದು ಮೇಯರ್ ಎಸ್.ಶಿವಕುಮಾರ್ ಹೇಳಿದರು.
ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ಮಹಾನಗರ ಪಾಲಿಕೆಯಿಂದ ನಿರ್ಮಿಸಿರುವ ಬೀದಿಬದಿ ವ್ಯಾಪಾರಿಗಳ ಮಾರಾಟ ವಲಯ ಮಹಿಳಾ ಬಜಾರ್‌ನಲ್ಲಿ ಪ್ರಾಯೋಗಿಕವಾಗಿ ಆಯೋಜಿಸಿದ್ದ ಮಹಿಳಾ ಸ್ವೇದ ಸಂತೆ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ಥಳೀಯವಾಗಿ ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರಿಗೆ ಮಹಿಳಾ ಬಜಾರ್ ಯೋಜನೆ ಅತ್ಯಂತ ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಮಹಿಳಾ ಉದ್ಯಮಿಗಳಿಗೆ ಸೂಕ್ತ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅನುಕೂಲವಾಗಲಿದೆ ಎಂದರು.
ಮಾಜಿ ಮೇಯರ್ ಸುನೀತಾ ಅಣ್ಣಪ್ಪ ಮಾತನಾಡಿ, ವಾರ್ಡ್‌ನಲ್ಲಿ ಕನ್ಸರ್‌ವೆನ್ಸಿ ಅಭಿವೃದ್ಧಿಪಡಿಸಿ ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹಿಸಲು ವಿಶೇಷವಾಗಿ ಮಹಿಳಾ ಬಜಾರ್ ಯೋಜನೆ ಸಿದ್ಧಪಡಿಸಲಾಗಿದೆ. ಮಹಿಳಾ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲ ಒದಗಿಸಲು ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲೇ ಕ್ರಮ ವಹಿಸಲಾಗುವುದು. ಪ್ರಸ್ತುತ ಪ್ರಾಯೋಗಿಕವಾಗಿ ಸಂತೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಮಹಾನಗರ ಪಾಲಿಕೆಯಿಂದ ಕೈಗೊಂಡಿರುವ ವಿಶೇಷ ಯೋಜನೆ ಶ್ಲಾಘನೀಯ. ಮಾರಾಟಗಾರರಿಗೆ ವೇದಿಕೆ ಒದಗಿಸುವ ಪ್ರಯತ್ನದ ಜತೆಯಲ್ಲಿ ಉತ್ಪನ್ನ ತಯಾರಕರಿಗೂ ಮಳಿಗೆಗಳನ್ನು ನೀಡುವ ಕೆಲಸ ಆಗಬೇಕು. ಇದರಿಂದ ಹೊಸ ಉದ್ಯಮ ಆಕಾಂಕ್ಷಿಗಳಿಗೆ ಸ್ಫೂರ್ತಿ ದೊರೆಯುತ್ತದೆ ಎಂದು ತಿಳಿಸಿದರು.
ಸಂಸ್ಥೆಯ ಶಿಲ್ಪಾ ಗೋಪಿನಾಥ್, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಕೆ.ವಿ.ಅಣ್ಣಪ್ಪ, ಜಗದೀಶ್, ಸವಿತಾ ಮಾಧವ್ ಇತರರಿದ್ದರು.