

ರಾಣೆಬೆನ್ನೂರ: ನಗರದ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಪಿ. ಶಾಂತ ಅವರಿಂದ ಅನಧಿಕೃತವಾಗಿ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ರಾಣೆಬೆನ್ನೂರ ತಾಲೂಕು ಸಂತ್ರಸ್ತ ಮಹಿಳಾ ಸಂಘದ ವತಿಯಿಂದ ಸೆ. 25ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟದ ಸಲಹೆಗಾರ ಹಾಗೂ ರೈತ ಸಂಘ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಪಿ. ಶಾಂತ ಅವರಿಂದ ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ಒಳಗಾದ 1522 ಜನ ಅಮಾಯಕ ಮಹಿಳೆಯರು ಇಂದಿಗೂ ಕೆಲಸ ಮಾಡಲಾಗದೆ ಪರದಾಡುತ್ತಿದ್ದಾರೆ. ಆದರೆ, ಸರ್ಕಾರ ಐದಾರು ವರ್ಷ ಕಳೆದರೂ ನೊಂದ ಮಹಿಳೆಯರಿಗೆ ಪರಿಹಾರ ಒದಗಿಸಿಲ್ಲ.
ಈ ಬಗ್ಗೆ ಹಲವಾರು ಬಾರಿ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂತ್ರಸ್ತ ಮಹಿಳೆಯರಿಗೆ ವಿಶೇಷ ಆರ್ಥಿಕ ನೆರವು ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಲಾಗುವುದು ಎಂದರು.
ಮಹಿಳಾ ಸಂಘದ ಅಧ್ಯಕ್ಷೆ ಲಲಿತಾ ಲಮಾಣಿ, ಕಾರ್ಯದರ್ಶಿ ಶೈಲಾ ರಂಗರಡ್ಡಿ, ಕೆ.ಆರ್. ಉಮೇಶ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.