

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳ ಟೀಕೆಗಳಿಗೆ ಶಕ್ತಿ ಯೋಜನೆ ಮೂಲಕ ರಾಜ್ಯದ ಮಹಿಳೆಯರು ಉತ್ತರ ನೀಡಿದ್ದಾರೆ ಎಂದು ಎಂಎಲ್‌ಸಿ ಬಲ್ಕಿಷ್ ಬಾನು ಹೇಳಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಶಕ್ತಿ ಯೋಜನೆ ಯಶಸ್ವಿ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಹಯೋಗದೊಂದಿಗೆ ಆಯೋಜಿಸಿದ್ದ ಶಕ್ತಿ ಯೋಜನೆ ಸಂಭ್ರಮದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಕ್ತಿ ಯೋಜನೆಯಡಿ ಮಹಿಳೆಯರು 500 ಕೋಟಿ ಬಾರಿ ಉಚಿತವಾಗಿ ಪ್ರಯಾಣಿಸಿದ್ದು, ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣ ಮಾಡುವತ್ತ ಸಾಗುತ್ತಿದೆ. ಇದಕ್ಕೆ ಶಕ್ತಿ ಯೋಜನೆ ಯಶಸ್ಸು ಪ್ರತ್ಯಕ್ಷ ಸಾಕ್ಷಿಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನುಡಿದಂತೆ ನಡೆದಿದ್ದು, ಐದು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದ ದಿನದಿಂದ ಪ್ರತಿಪಕ್ಷದವರು ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ರವಾನಿಸುತ್ತಿದ್ದರು. ಆ ಎಲ್ಲ ಟೀಕೆ, ವಿರೋಧಗಳಿಗೆ ಮಹಿಳೆಯರೇ ಉತ್ತರ ಕೊಟ್ಟಿದ್ದಾರೆ ಎಂದರು.
ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಕೆಪಿಸಿಸಿ ಕಾರ್ಯದರ್ಶಿ ಎನ್.ರಮೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಎಚ್.ಸಿ.ಯೋಗೇಶ್, ಡಿಟಿಒ ದಿನೇಶ್ ಕುಮಾರ್ ಚನ್ನಗಿರಿ, ಡಿಪೋ ವ್ಯವಸ್ಥಾಪಕ ರಾಮಚಂದ್ರ, ಜಿಲ್ಲಾ ಸಂಚಾರ ನಿಯಂತ್ರಕ ಎ.ವಿ.ಪ್ರಕಾಶ್, ಕಾಂಗ್ರೆಸ್ ಮುಖಂಡರು ಮತ್ತು ಅಧಿಕಾರಿಗಳು ಹಾಜರಿದ್ದರು.
ಬಸ್‌ಗೆ ಪೂಜೆ, ನಿಲ್ದಾಣಕ್ಕೆ ಅಲಂಕಾರ
ಶಕ್ತಿ ಯೋಜನೆಯನ್ನು ಸ್ಮರಣೀಯವಾಗಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಾಳೆ ಕಂದು, ಮಾವಿನ ತೋರಣದಿಂದ ಬಸ್‌ಗಳು ಹಾಗೂ ನಿಲ್ದಾಣವನ್ನುಅಲಂಕರಿಸಲಾಗಿತ್ತು. ಇದೇ ವೇಳೆ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ಸನ್ಮಾನಿಸಲಾಯಿತು.