

ಶಿವಮೊಗ್ಗ: ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟಕ್ಕೆ ವಿವಿಧೆಡೆ ಮನೆಗಳು ಧರೆಗುರುಳಿವೆ. ವಿದ್ಯುತ್ ಕಂಬಗಳು ಗಾಳಿಯ ರಭಸಕ್ಕೆ ನೆಲಕ್ಕುರುಳುತ್ತಿವೆ. ಭದ್ರಾ ನದಿಯ ಪ್ರವಾಹಕ್ಕೆ ತಗ್ಗು ಪ್ರದೇಶದ ಜನರು ಕಂಗಾಲಾಗಿದ್ದಾರೆ.50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.
ಶಿವಮೊಗ್ಗ ತಾಲೂಕಿನ ಅಗಸವಳ್ಳಿ ಸಮೀಪದ ಗೌಳಿ ನಗರದಲ್ಲಿ ಮನೆ ಗೋಡೆ ಕುಸಿದು ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರು ಮಕ್ಕಳೂ ಇದ್ದಾರೆ. ಬಿಬಿಜಾನ್(55), ಉಮರ್(7), ಸಾಧಿಕ್(6) ಹಾಗೂ ಅಬ್ದುಲ್(17) ಗಾಯಾಳುಗಳು. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಜಿಲ್ಲೆಯಲ್ಲಿ 3 ಕಾಳಜಿ ಕೇಂದ್ರಗಳ ಆರಂಭಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ 316 ಮಂದಿಗೆ ಆಶ್ರಯ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 106 ಮನೆಗಳಿಗೆ ಹಾನಿಯಾಗಿದೆ. 25 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಲಿಂಗನಮಕ್ಕಿ ಜಲಾಶಯಕ್ಕೆ 77 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೇವಲ 24 ತಾಸಿನಲ್ಲೇ ಜಲಾಶಯದಲ್ಲಿ ಎರಡೂವರೆ ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ನೀರಿನ ಸಂಗ್ರಹ 1,805 ಅಡಿಗಳನ್ನು ಮೀರಿದೆ. ಜಲಾನಯನ ಪ್ರದೇಶದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಅಪಾರ ಪ್ರಮಾಣದ ನೀರು ಬರುತ್ತಿದೆ. ಈ ಭಾಗದಲ್ಲಿ ಮಂಗಳವಾರವೂ ವ್ಯಾಪಕ ಮಳೆಯಾಗಿದೆ.
ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ ಭಾಗದಲ್ಲಿ ಕಳೆದ ಮೂರ‌್ನಾಲ್ಕು ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯಕ್ಕೆ 48 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಳೆ ಹೀಗೆಯೇ ಮುಂದುವರಿದರೆ ಶಿವಮೊಗ್ಗದ ನಗರದಲ್ಲಿ ತುಂಗಾ ನದಿಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಬಹುದೆಂಬ ಮುನ್ನೆಚ್ಚರಿಕೆಯಿಂದ ಜಲಾಶಯದ ನೀರಿನ ಸಂಗ್ರಹದಲ್ಲಿ ಸುಮಾರು ಅರ್ಧ ಮೀಟರ್‌ನಷ್ಟು ಕಡಿತಗೊಳಿಸಲಾಗಿದೆ. ಜಲಾಶಯದ 21 ಕ್ರಸ್ಟ್‌ಗೇಟ್‌ಗಳ ಮೂಲಕ ಒಳಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಟ್ಟು ಪರಿಸ್ಥಿತಿ ನಿಯಂತ್ರಿಸಲಾಗುತ್ತಿದೆ.