ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಪ್ರಸ್ತುತ ಅರಬ್ಬಿ ಸಮುದ್ರದಲ್ಲಿ ಹವಾಮಾನ ಏರುಪೇರಾಗಿದ್ದು, ಗಾಳಿಯ ಒತ್ತಡ ತೀವ್ರಗೊಂಡಿದೆ. ಕರಾವಳಿ ತೀರದ ಉದ್ದಕ್ಕೂ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಮತ್ತು ಪ್ರವಾಸಿಗರು ಸಮುದ್ರಕ್ಕೆ ಇಳಿಯಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಿವೆ. ಮೇ 23ರ ಶನಿವಾರದಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಮೂಡುಬಿದಿರೆ ಪರಿಸರದಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ ನಗರ, ಕುಂದಾಪುರ, ಕಾರ್ಕಳ, ಮಣಿಪಾಲ ಹಾಗೂ ಕಾರವಾರ, ಭಟ್ಕಳದ ಕರಾವಳಿ ತೀರದ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.