SpiceJet: ವಿಮಾನ ವಿಳಂಬದಿಂದ ಕೆರಳಿದ ಪ್ರಯಾಣಿಕರು ಸ್ಪೈಸ್ಜೆಟ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಾಗ್ವಾದ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ ಕೆಲ ಪ್ರಯಾಣಿಕರು ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಿಬ್ಬಂದಿಯನ್ನು 'ಚೋರ್' (ಕಳ್ಳರು) ಎಂದು ಕೂಗುತ್ತಾ ಗಲಾಟೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಘಟನೆ ಯಾವ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂಬುದು ಈವರೆಗೆ ಸ್ಪಷ್ಟವಾಗಿಲ್ಲ. ವಿಮಾನ ವಿಳಂಬದಿಂದ ಪ್ರಯಾಣಿಕರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿದೆ ಎಂದು ವರದಿಗಳು ತಿಳಿಸಿವೆ.
ವೈರಲ್ ವಿಡಿಯೋದಲ್ಲಿ ಓರ್ವ ಪ್ರಯಾಣಿಕ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ಸಿಬ್ಬಂದಿ ಜೊತೆ ದೈಹಿಕವಾಗಿ ಸಂಘರ್ಷಕ್ಕಿಳಿದಿರುವ ಆರೋಪವೂ ಕೇಳಿಬಂದಿದೆ. ಗಲಾಟೆ ತೀವ್ರಗೊಳ್ಳುತ್ತಿದ್ದಂತೆ ಇತರ ಪ್ರಯಾಣಿಕರು ಹಾಗೂ ಸಿಬ್ಬಂದಿಯೂ ಸ್ಥಳದಲ್ಲಿ ಜಮಾಯಿಸಿದ್ದಾರೆ. ಈ ವೇಳೆ ಓರ್ವ ಸಿಬ್ಬಂದಿ ಕೂಡ ಆಕ್ರೋಶದಿಂದ ಪ್ರತಿಕ್ರಿಯಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ವಿಮಾನ ವಿಳಂಬದಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲವೇ ಈ ಸಂಘರ್ಷಕ್ಕೆ ಕಾರಣ ಎನ್ನಲಾಗಿದೆ. ಆದರೆ, ಘಟನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಹಾಗೂ ನಿಖರ ಸ್ಥಳ ಇನ್ನೂ ದೃಢಪಟ್ಟಿಲ್ಲ. ಈ ಬಗ್ಗೆ ಸ್ಪೈಸ್ಜೆಟ್ ಸಂಸ್ಥೆ ಯಾವುದೇ ಕ್ರಮ ಕೈಗೊಂಡಿದೆಯೇ ಎಂಬ ಮಾಹಿತಿ ಕೂಡ ಲಭ್ಯವಾಗಿಲ್ಲ.
ಸ್ಪೈಸ್ಜೆಟ್ ಸಿಬ್ಬಂದಿ ಮತ್ತು ಪ್ರಯಾಣಿಕರ ನಡುವಿನ ಸಂಘರ್ಷ ಇದೇ ಮೊದಲಲ್ಲ. 2026ರ ನವೆಂಬರ್ನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೈಸ್ಜೆಟ್ ವಿಮಾನ ರದ್ದಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದರು ಎನ್ನಲಾಗಿದೆ.
ಇನ್ನು, 2025ರ ಜುಲೈನಲ್ಲಿ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಕ್ಯಾಬಿನ್ ಬ್ಯಾಗೇಜ್ ಶುಲ್ಕದ ವಿಚಾರವಾಗಿ ಭಾರತೀಯ ಸೇನೆಯ ಓರ್ವ ಅಧಿಕಾರಿ ಸ್ಪೈಸ್ಜೆಟ್ನ ಹಲವು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಘಟನೆಯಲ್ಲಿ ಸಿಬ್ಬಂದಿಗೆ ಗಾಯಗಳಾಗಿದ್ದು, ವಿಮಾನಯಾನ ಸಂಸ್ಥೆ ಪೊಲೀಸರಿಗೆ ದೂರು ನೀಡಿತ್ತು.