

ಬೆಂಗಳೂರು: ವೇಗವಾಗಿ ಬಂದ ದ್ವಿಚಕ್ರ ವಾಹನವು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.
ಅಸ್ಸಾಂ ಮೂಲದ ಸಾಹಿಲ್ ಅಹಮ್ಮದ್ (೧೯) ಮೃತ ಯುವಕ. ಕಾಡು ಬೀಸನಹಳ್ಳಿ ಬಳಿಯ ಕರಿಯಮ್ಮನ ಅಗ್ರಹಾರ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.
ನಗರದ ದೇವರಬೀಸನಹಳ್ಳಿಯಲ್ಲಿ ವಾಸವಾಗಿದ್ದ ಸಾಹಿಲ್, ಖಾಸಗಿ ಕಂಪನಿಯಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ. ದ್ವಿಚಕ್ರ ವಾಹನದಲ್ಲಿ ರಾತ್ರಿ ಮನೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ನಿರ್ಲಕ್ಷ್ಯದಿಂದ ಅತಿ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಚ್‌ಎಎಲ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.