

ಕಡೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಚಿಂತಕಿ ಪಲ್ಲವಿ ತಿಳಿಸಿದರು.
ಅಂಬೇಡ್ಕರ್ ಪರಿನಿರ್ವಾಣದ ಅಂಗವಾಗಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಎಬಿವಿಪಿ ಸೋಮವಾರ ಏರ್ಪಡಿಸಿದ್ದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಭವಿಷ್ಯದಲ್ಲಿ ರಾಷ್ಟ್ರವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬುದನ್ನು ಅಂಬೇಡ್ಕರ್ ಬರಹ ಮತ್ತು ಭಾಷಣಗಳಲ್ಲಿ ಕಾಣಬಹುದು. ಅವರ ಅಧ್ಯಯನಶೀಲತೆ ಮತ್ತು ಕ್ರಿಯಾಶೀಲತೆಯನ್ನು ನಾವೆಲ್ಲರೂ ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡರೆ ದೇಶಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಡಲು ಸಾಧ್ಯ. ಮಹಾಜ್ಞಾನಿಯ ಚಿಂತನೆಗಳು ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ. ಪ್ರತಿಯೊಬ್ಬ ವಿದ್ಯಾರ್ಥಿಯೂ ಪುಸ್ತಕದಿಂದ ಮಸ್ತಕಕ್ಕೆ ಮುಟ್ಟಬೇಕೆಂದು ಎಪಿವಿಪಿ ಹಲವು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು. ಉಪನ್ಯಾಸಕ ಜ್ಞಾನೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದಾರ್ಥ, ಜಿಲ್ಲಾ ಸಹ ಸಂಚಾಲಕ ಚಂದು, ಭೀಮಾ, ರೋಹಿತ್, ಯಶವಂತ್ ಮತ್ತಿತರರಿದ್ದರು.