

ತಾಲೂಕಿನ ವಾಜಮಂಗಲ ಗ್ರಾಮಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಹೂ ಮಾಲೆ ಹಾಕಿ ಗೌರವ ಸಲ್ಲಿಸಿದ್ದಲ್ಲದೇ, ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ವಾಜಮಂಗಲ ಗ್ರಾಮದ ಮುಖಂಡರು ನಡೆದಿರುವ ಘಟನೆಯ ಬಗ್ಗೆ ವಿವರವಾಗಿ ತಿಳಿಸಿದರು. ಇನ್ನು ಮುಂದೆ ಇಂತಹ ಪ್ರಕರಣಗಳು ಆಗದಂತೆ ನೋಡಿಕೊಳ್ಳಬೇಕಾದರೆ, ಈ ರೀತಿ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಘಟನೆಯ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಲಾಗಿದ್ದು, ಅಕ್ಕಪಕ್ಕದ ಸಿಸಿ ಕ್ಯಾಮರಾಗಳನ್ನು ಸಹ ಪರಿಶೀಲನೆ ಮಾಡಲಾಗಿದೆ. ಆದಷ್ಟು ಬೇಗ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದರು.
ಬಳಿಕ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಡಾ.ಬಿ.ಆರ್ ಅಂಬೇಡ್ಕರ್ ಪೋಸ್ಟರ್ ಹರಿದು ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಆದಷ್ಟು ಬೇಗ ಬಂಧಿಸಿ, ಸೂಕ್ರ ಕ್ರಮ ಕೈಗೊಳ್ಳಿ. ಇನ್ನು ಮುಂದೆ ಇಂತಹ ಪ್ರಕರಣಗಳು ಜರುಗದಂತೆ ನೋಡಿಕೊಳ್ಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಮಣ್ಯ, ಕೆ.ಎಸ್. ಶಿವರಾಮು, ಜವರಪ್ಪ, ಕಾಂಗ್ರೆಸ್ ಪಕ್ಷದ ಕಾನೂನು ವಿಭಾಗದ ಎಂ.ಸಿ. ಹುಂಡಿ ಶಿವಪ್ರಸಾದ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎಂ.ಟಿ. ರವಿಕುಮಾರ್, ಮುದ್ದರಾಮೇಗೌಡ, ಮಣಿಯಯ್ಯ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ತಹಸೀಲ್ದಾರ್ ಮಹೇಶ್ ಕುಮಾರ್, ಹಿರಿಯ ಪೊಲೀಸ್ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಜರಿದ್ದರು.