ಅಗತ್ಯ ಅನುದಾನ ಬಿಡುಗಡೆಗೊಳಿಸುವ ಭರವಸೆ

11 ckm 6
ಚಿಕ್ಕಮಗಳೂರು ಮೆಡಿಕಲ್‌ ಕಾಲೇಜು ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಪರಿಶೀಲಿಸಿದರು,
Published on

ಚಿಕ್ಕಮಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಬುಧವಾರ ಚಿಕ್ಕಮಗಳೂರು ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜು ಹಾಗೂ ನಿರ್ಮಾಣ ಹಂತದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಜೊತೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಜನರಿಗೆ ಅನುಕೂಲ ಒದಗಿಸಿಕೊಡಬೇಕು ಎಂದು ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೊದಲು ಮೆಡಿಕಲ್ ಕಾಲೇಜು ಪಕ್ಕದಲ್ಲೇ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ ತೆರಳಿ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ ನೆಲ ಅಂತಸ್ಥನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ. ಮೊದಲ ಹಾಗೂ ಎರಡನೇ ಮಹಡಿಯಲ್ಲಿ ಯಾವ ವಿಭಾಗ ತೆರಯಲು ಉದ್ದೇಶಿಸಲಾಗಿದೆ ಎಂಬ ಬಗ್ಗೆ ಮಾಹಿತಿ ಪಡೆದರು. ಜೊತೆಗೆ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ವಾರ್ಡ್ಗಳ ಸಂಖ್ಯೆ ಹೆಚ್ಚಳ ಮಾಡಲು ಅವಕಾಶವಿದ್ದರೆ ಆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಬಳಿಕ ಮೆಡಿಕಲ್ ಕಾಲೇಜಿನ ಸಭಾಂಗಣಲ್ಲಿ ಮೆಡಿಕಲ್ ಕಾಲೇಜು ಡೀನ್, ಜಿಲ್ಲಾಸ್ಪತ್ರೆ ಎಂ.ಎಸ್. ಸೇರಿದಂತೆ ಮೆಡಿಕಲ್ ಕಾಲೇಜಿನ ಅಧಿಕಾರಿ ವರ್ಗದವರೊಂದಿಗೆ ಸಭೆ ನಡೆಸಿದ ಸಚಿವರು ಮೆಡಿಕಲ್ ಕಾಲೇಜು ಸೇರಿದಂತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಬಂಧಿಸಿದ ವರದಿ ಪಡೆದರು. ಜೊತೆಗೆ ಯಾವ ವಿಭಾಗಕ್ಕೆ ಎಷ್ಟು ಹುದ್ದೆಗಳು ಮಂಜೂರಾಗಿವೆ ಹಾಗೂ ಮಂಜೂರಾಗಿರುವ ಹುದ್ದೆಗಳಲ್ಲಿ ಎಷ್ಟು ಖಾಲಿ ಉಳಿದಿವೆ. ಹೊರಗುತ್ತಿಗೆ ಆಧಾರದ ಮೇಲೆ ಎಷ್ಟು ಜನರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಮೆಡಿಕಲ್ ಕಾಲೇಜು ಡೀನ್ ಡಾ. ಹರೀಶ್ ಅವರನ್ನು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಾ.ಹರೀಶ್, ಈಗಾಗಲೇ ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದಂತೆ ಸೂಕ್ತ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಕೆಲ ಖಾಯಂ ನೌಕರರ ನೇಮಕ ನಡೆದಿದೆ. ಜೊತೆಗೆ ಹೊರಗುತ್ತಿಗೆ ಆಧಾರದ ಮೇಲೆಯೂ ಎಲ್ಲ ವಿಭಾಗಕ್ಕೂ ನೇಮಕಾತಿ ಮಾಡಿಕೊಳ್ಳಲಾಗಿದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಶರಣ ಪ್ರಕಾಶ್ ಪಾಟೀಲ್, ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಕಾಮಗಾರಿ ಶೇ. ೯೦ರಷ್ಟು ಪೂರ್ಣಗೊಂಡಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಸಂಪೂರ್ಣ ಕಾಮಗಾರಿ ಮುಕ್ತಾಯವಾಗಲಿದೆ. ಜೊತೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೇ. ೭೫ರಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ೧೮೭ ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಳ್ಳುತ್ತಿದ್ದು, ಈಗಾಗಲೇ ೧೦೫ ಕೋಟಿ ರೂ. ಬಿಡುಗಡೆಯಾಗಿದೆ. ಉಳಿದ ೮೨ ಕೋಟಿ ರೂ. ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ನೀರಿನ ಸಮಸ್ಯೆಯಿದೆ. ಕೊಳವೆಬಾವಿಗಳನ್ನು ಕೊರೆಯಿಸಿದರೂ ಬೇಕಾದಷ್ಟು ನೀರು ಸಿಗುತ್ತಿಲ್ಲ. ಹೀಗಾಗಿ ಮಳೆ ನೀರು ಕೊಯ್ಲು ಮೂಲಕ ಮೆಡಿಕಲ್ ಕಾಲೇಜಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲಾಗುತ್ತದೆ. ಇದಕ್ಕಾಗಿ ೩.೫೦ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಶಾಸಕರಾದ ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಭದ್ರಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಮೆಡಿಕಲ್ ಕಾಲೇಜು ಡೀನ್ ಡಾ.ಹರೀಶ್, ಎಂಎಸ್ ಡಾ.ಮೋಹನ್ ಕುಮಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net