ವಿಜಯವಾಣಿ ಸುದ್ದಿಜಾಲ ಕೋಲಾರ
ರಾಜ್ಯದಲ್ಲಿನ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೋಮವಾರ ಜಿಲ್ಲಾಧಿಕಾರಿ ಕಛೇರಿ ಮುಂದೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿ ಡಿಸಿ ಅಕ್ರಂ ಪಾಷ ಮುಖಾಂತರ ವಿಪಕ್ಷ ನಾಯಕರಾದ ಆರ್.ಅಶೋಕ್ ಹಾಗೂ ಎಚ್.ಡಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ನಗರದ ಶಾಶ್ವತ ನೀರಾವರಿ ವೇದಿಕೆಯಲ್ಲಿ ಧರಣಿ ಕುಳಿತಿರುವ ಅತಿಥಿ ಉಪನ್ಯಾಸಕರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ ಪ್ರತಿಭಟನಾಕಾರರು ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಬಗ್ಗೆ ಧ್ವನಿಯಾಗಿ ಮಾತನಾಡಬೇಕು ಎಂದು ಆಗ್ರಹಿಸಿದರು.
ಅತಿಥಿ ಉಪನ್ಯಾಸಕರ ಸಂಘಟನೆಯ ರಾಜ್ಯ ಅಧ್ಯಕ್ಷ ನಾಗನಾಳ ಮುನಿಯಪ್ಪ ಮಾತನಾಡಿ, ಸರಕಾರದಿಂದ ಅತಿಥಿ ಉಪನ್ಯಾಸಕರ ಶ್ರಮಕ್ಕೆ ಬೆಲೆ ಕೊಡಿ ಎಂದು ನಿರಂತರವಾಗಿ ಸುಮಾರು ೧೫ ದಿನಗಳಿಂದ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಲ್ಲಿ ಪ್ರತಿಭಟನೆ ಧರಣಿ ನಡೆಸಲಾಗುತ್ತಾ ಇದ್ದರು ಸರ್ಕಾರವು ಮಾತ್ರ ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ನಮ್ಮ ಸೇವಾ ಅವಧಿಯನ್ನು ಪರಿಗಣಿಸಿ ಮಾನವೀಯತೆಯ ದೃಷ್ಟಿಯಿಂದ ತಕ್ಷಣ ಸರ್ಕಾರ ಕೂಡಲೇ ಅಥಿತಿ ಉಪನ್ಯಾಸಕರನ್ನು ಖಾಯಂ ಮಾಡಬೇಕು ಎಂದು ಸರ್ಕಾರದ ಮೇಲೆ ವಿಪಕ್ಷ ನಾಯಕರಾದ ಆರ್.ಅಶೋಕ್ ಹಾಗೂ ಎಚ್.ಡಿ ಕುಮಾರಸ್ವಾಮಿ ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರಿಂದ ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಅಕ್ರಂ ಪಾಷ ನಿಮ್ಮ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವರ ಗಮನಕ್ಕೆ ಈಗಾಗಲೇ ತರಲಾಗಿದೆ. ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಆದಷ್ಟು ಬೇಗ ನಿಮ್ಮ ಬೇಡಿಕೆಗಳನ್ನು ಈಡೇರಿಸುವ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು.
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ರಾಜ್ಯ ಸಂಚಾಲಕಿ ಸಿ.ಎನ್ ನಾಗಮಣಿ, ಜಿಲ್ಲಾಧ್ಯಕ್ಷ ಎ.ಬಿ.ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿನಾರಾಯಣ್, ಸಹ ಕಾರ್ಯದರ್ಶಿ ಕೆ.ಎನ್.ನಾಗರಾಜ್, ಜಿಲ್ಲಾ ಮುಖಂಡರಾದ ರವಿಕುಮಾರ್, ರವೀಂದ್ರ, ತ್ಯಾಗರಾಜ್, ಮಣಿ, ಬಾಲಾಜಿ, ಲಕ್ಷ್ಮೀ, ಶಿವಣ್ಣ, ಸಿದ್ದರಾಜು, ಪ್ರಭಾಕರ್, ಚೇತನ, ಸಪ್ನ, ಮುಂತಾದವರು ಉಪಸ್ಥಿತರಿದ್ದರು.
ಚಿತ್ರ ೧೧ ಕೆ.ಎಲ್.ಆರ್. ೦೨ : ಅತಿತಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕೆAದು ಒತ್ತಾಯಿಸಿ, ಜಿಲ್ಲಾಧಿಕಾರಿಗಳ ಮೂಲಕ ವಿರೋಧ ಪಕ್ಷದ ನಾಯಕ ಆರ್.ಆಶೋಕ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೋಲಾರ ಅತಿಥಿ ಉಪನ್ಯಾಸಕರು ಮನವಿ ನೀಡುತ್ತಿರುವುದು.