

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಎ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿದ್ದುಪಡಿ ಮಾಡುವುದಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಈ ಕುರಿತಾಗಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪೀಠ ವಿಚಾರಣೆ ನಡೆಸಿತು.
ಈ ವೇಳೆ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಈಗಾಗಲೇ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಆದರೆ, ಆರೋಪ ಪಟ್ಟಿ ಸಲ್ಲಿಸುವುದಕ್ಕೂ ಮುನ್ನ ಈ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ಅರ್ಜಿ ತಿದ್ದುಪಡಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಪ್ರತಿಕ್ರಯಿಸಿದ ಪೀಠ, ಅರ್ಜಿ ತಿದ್ದುಪಡಿಗೆ ಬದಲಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಸಲಹೆ ನೀಡಿತು.
ಇದಕ್ಕೆ ಸಿ.ವಿ.ನಾಗೇಶ್ ಹೊಸದಾಗಿ ಅರ್ಜಿ ಸಲ್ಲಿಸಬೇಕಾದರೆ ಪ್ರಕ್ರಿಯೆ ಹೊಸದಾಗಿ ಪ್ರಾರಂಭಿಸಬೇಕಾಗುತ್ತದೆ. ಹೀಗಾಗಿ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಬೇಕು ಎಂದು ಕೋರಿದರು.
ಇದಕ್ಕೆ ಸರ್ಕಾರದ ಪರ ವಕೀಲ ಪ್ರೋ. ರವಿವರ್ಮ ಕುಮಾರ್ ಹೊಸದಾಗಿ ಅರ್ಜಿ ಸಲ್ಲಿಸಿದರೆ, ಮತ್ತೆ ಹೊಸದಾಗಿ ಆಕ್ಷೇಪಣೆಯನ್ನೂ ಸಲ್ಲಿಸಬೇಕಾಗುತ್ತದೆ. ಹೀಗಾಗಿ ಅರ್ಜಿ ತಿದ್ದುಪಡಿ ಮಾಡುವುದು ನ್ಯಾಯಾಲಯಕ್ಕೆ ಬಿಟ್ಟ ವಿಚಾರವಾಗಿದೆ. ಅಲ್ಲದೆ, ತಿದ್ದುಪಡಿ ಅರ್ಜಿಗೂ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ವಾದ ಆಲಿಸಿದ ನ್ಯಾಯಪೀಠ, ಮುಂದಿನ 10 ದಿನಗಳಲ್ಲಿ ಅರ್ಜಿಯನ್ನು ತಿದ್ದುಪಡಿ ಮಾಡುವುದಕ್ಕೆ ಅವಕಾಶ ನೀಡಿ ವಿಚಾರಣೆಯನ್ನು ನ.15ಕ್ಕೆ ಮುಂದೂಡಿತು.