ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹರಿಪ್ರಸಾದ್ ಅವರು, ಬೆಲೆಕೇರಿ ಅಕ್ರಮ ಅದಿರು ಕಳ್ಳ ಸಾಗಾಣೆ ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 8,05,991.083 ಟನ್ ಅಕ್ರಮ ಅದಿರನ್ನು ಮುಟ್ಟುಗೋಲು ಹಾಕಿಕೊಂಡಿದ್ದರು. ಈ ಅದಿರನ್ನು ಅದಾನಿ ಕಂಪನಿಯವರು ದೊಡ್ಡ ಪ್ರಮಾಣದಲ್ಲಿ ಕಳ್ಳಸಾಗಾಣಿಕೆ ಮಾಡಿರುತ್ತಾರೆ. ಅದರಲ್ಲಿ ಮಲ್ಲಿಕಾರ್ಜುನ ಶಿಪ್ಪಿಂಗ್, ಅದಾನಿ ಎಂಟರ್ ಪ್ರೈಸಸ್, ಸಲ್ಗಾಂವಕರ್ ಮೈನಿಂಗ್ ಇಂಡಸ್ಟ್ರಿ ಮತ್ತು ರಾಜ್ ಮಹಲ್ ಕಂಪನಿಗಳು ಈ ಅದಿರನ್ನು ವಿದೇಶಕ್ಕೆ ಕಳ್ಳಸಾಗಾಣಿಕೆ ಮಾಡುತ್ತಿರುವುದನ್ನು ಲೋಕಾಯುಕ್ತ ತನಿಖೆಯಲ್ಲಿ ಪತ್ತೆಯಾಗಿತ್ತು. ಎಲ್ಲಾ ಕಂಪನಿಗಳ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆಯೂ ಲೋಕಾಯುಕ್ತ ಸಂಸ್ಥೆ ಶಿಫಾರಸ್ಸು ನೀಡಿತ್ತು ಎಂದು ತಿಳಿಸಿದರು.