

ಬೆಂಗಳೂರು: ನಗರದ ಕೆ.ಆರ್ ಮಾರುಕಟ್ಟೆಯಲ್ಲಿರುವ ಪಾದಚಾರಿ ಮಾರ್ಗ ಹಾಗೂ ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಮಳಿಗೆಗಳನ್ನು ತೆರವುಗೊಳಿಸಲು ಆದೇಶಿಸಬೇಕು ಎಂದು ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ಆಲ್ ಟ್ರೇಡರ್ಸ್ ಫಾರ್ಮರ್ಸ್ ಮರ್ಚಂಟ್ ವೆಲ್‌ಫೇರ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿ, ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ, ಬಿಬಿಎಂಪಿ ಮುಖ್ಯ ಆಯುಕ್ತರು, ಉಪ ಆಯುಕ್ತರು (ಮಾರುಕಟ್ಟೆ) ಜಂಟಿ ಆಯುಕ್ತರು ಪೊಲೀಸ್ ಆಯುಕ್ತರು ಸೇರಿದಂತೆ ಮತ್ತಿತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.