ಅಪೌಷ್ಟಿಕ ಮಕ್ಕಳಿಗೆ ಸರ್ಕಾರದ ಸವಲತ್ತು ತಲುಪಿಸಿ

12
Published on

ರಾಜ್ಯ ಸರ್ಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರದ ಸವಲತ್ತು ಅರ್ಹ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೂಸುಂಬೆ ಹೇಳಿದರು.

ನಗರದ ಚೆಲುವಾಂಬ ಆಸ್ಪತ್ರೆಯ ಮಕ್ಕಳ ವಾರ್ಡ್‌ಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ ಅವರು, ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಅಪೌಷ್ಟಿಕ ಮಕ್ಕಳಿಗೆ ಸರಿಯಾದ ಆರೈಕೆ ಒದಗಿಸಿ ಅವರನ್ನು ಸದೃಢರಾಗುವಂತೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ 91 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದರೆ ಆಸ್ಪತ್ರೆಯಲ್ಲಿರುವ ವಾರ್ಡ್‌ಗಳಲ್ಲಿ ಒಂದು ಮಗುವೂ ದಾಖಲಾಗಿಲ್ಲ. ಸರ್ಕಾರ ನೀಡುತ್ತಿರುವ ಸವಲತ್ತು ಆ ಮಕ್ಕಳಿಗೆ ತಲುಪುತ್ತಿಲ್ಲ. ಇನ್ನೂ 3 ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ 91 ಮಕ್ಕಳನ್ನು ಗುರುತಿಸಿ ಚಿಕಿತ್ಸೆ ನೀಡಿ ನಮಗೆ ವರದಿ ನೀಡಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದರು.

ಚೆಲುವಾಂಬ ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಮಕ್ಕಳ ಅಪೌಷ್ಟಿಕ ಪುನರ್ವಸತಿ ಕೇಂದ್ರ ಎಂಬ ಫಲಕವನ್ನು ತೆಗೆದು ಮಕ್ಕಳ ಅಪೌಷ್ಟಿಕ ಪುನರ‌್ಚೇತನ ಘಟಕ ಎಂಬ ನಾಮಫಲಕ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net