

ಬಾಳೆಹೊನ್ನೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ.
ಗುರುಪ್ರಸಾದ್ ಬಂಧಿತ ವ್ಯಕ್ತಿ. ಬಾಳೆಹೊನ್ನೂರು ಠಾಣೆ ವ್ಯಾಪ್ತಿಯ ಎನ್.ಆರ್.ಪುರ ತಾಲೂಕಿನ ಕಾಡಂಚಿನ ಗ್ರಾಮವೊಂದರಲ್ಲಿ ವಾಸವಿರುವ ಬಾಲಕಿಗೆ ಭಾನುವಾರ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿದೆ. ಪಾಲಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಬಾಲಕಿ ಬಳಿ ವಿಚಾರಿಸಿದಾಗ ಆರೋಪಿಯು ನಿನ್ನನ್ನು ಪ್ರೀತಿಸುತ್ತಿದ್ದೇನೆ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಹೇಳಿ ನನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಅಲ್ಲದೆ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಬಾಲಕಿ ತಿಳಿಸಿದ್ದಾಳೆ. ಘಟನೆ ಕುರಿತು ಬಾಲಕಿಯ ಪಾಲಕರು ಬಾಳೆಹೊನ್ನೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.