

ಬೆಂಗಳೂರು: ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ನಿಗದಿಪಡಿಸಿರುವ 25 ರೂ. ಶುಲ್ಕವನ್ನು 50 ರೂ.ಗೆ ಹೆಚ್ಚಿಸಬೇಕು. ಬೆಂಗಳೂರು ಒನ್ ರೀತಿ ಗ್ರಾಮ ಒನ್ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸೇರಿ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಮೊದಲ ವರದಿ ಕುರಿತು ಕಂದಾಯ ಇಲಾಖೆ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಅನುಪಾಲನಾ ವರದಿ ಸಲ್ಲಿಸುವಂತೆ ಸರ್ಕಾರ ಅನಧಿಕೃತ ಟಿಪ್ಪಣಿ ಹೊರಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಅ.21ರಂದು ನಡೆದ ಸಭೆಯ ನಡವಳಿಯನ್ನು ಜಾರಿಗೊಳಿಸಲು ಎಲ್ಲ ಅಪರ ಮುಖ್ಯ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.
ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ ಮೊದಲ ವರದಿ ಶಿಫಾರಸುಗಳನ್ನು ಜಾರಿಗೆ ತರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಶಿಫಾರಸುಗಳ ಅನುಷ್ಠಾನ ಕುರಿತು ಸಭೆ ನಡೆಸಿ ರೂಪಿಸಲಾದ ನಡವಳಿಯನ್ನು ಅನುಷ್ಠಾನಗೊಳಿಸುವ ದೃಷ್ಟಿಯಿಂದ ಈ ಅನಧಿಕೃತ ಟಿಪ್ಪಣಿ ಹೊರಡಿಸಿದ್ದಾರೆ.