

ಬೆಂಗಳೂರು: ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿರುವ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು, ಕರ್ತವ್ಯಕ್ಕೆ ಗೈರಾಗುವ ಮೂಲಕ ಗುರುವಾರದಿಂದ ಮುಷ್ಕರ ಆರಂಭಿಸಿದ್ದಾರೆ.
ಸುಮಾರು 30 ಸಾವಿರ ನೌಕರರು ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರಗಳು ಸೇರಿದಂತೆ ವಿವಿಧೆಡೆ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ೋಷಣೆಗಳನ್ನು ಕೂಗಿದರು.
ಆರೋಗ್ಯ ಸಿಬ್ಬಂದಿಯ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೂಡ ಬೆಂಬಲ ಸೂಚಿಸಿದ್ದು, ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿ ಕೆಲಸಕ್ಕೆ ಹಾಜರಾಗದ ಪರಿಣಾಮ ಕೆಲ ಆಸ್ಪತ್ರೆಗಳು ಹಾಗೂ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯವಾಗಿ, ರೋಗಿಗಳು ಚಿಕಿತ್ಸೆಗೆ ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ವೇತನ ಹೆಚ್ಚಳ, ಪದೋನ್ನತಿ, ಸೇವಾ ಭದ್ರತೆ, ವೈದ್ಯಕೀಯ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಈ ಹಿಂದೆ ಪ್ರತಿಭಟನೆ ನಡೆಸಿದಾಗ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದಕ್ಕಾಗಿ ಪರಿಶೀಲನಾ ಸಮಿತಿ ಸಹ ರಚಿಸಿತ್ತು. ಆದರೆ, ಈವರೆಗೂ ಯಾವುದೇ ಬೇಡಿಕೆ ಈಡೇರಲಿಲ್ಲ. ಹಾಗಾಗಿ ಸೇವೆ ಬಹಿಷ್ಕರಿಸಿ ಮನೆಯಲ್ಲಿಯೇ ಉಳಿದಿದ್ದೇವೆ. ಬೇಡಿಕೆ ಈಡೇರಿದ ಕೂಡಲೇ ಕೆಲಸಕ್ಕೆ ಹಾಜರಾಗುತ್ತೇವೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಯಮೋಜಿ ತಿಳಿಸಿದರು.
ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಕೇಂದ್ರಗಳ ಕಾರ್ಯಾಚರಣೆ ಹಾಗೂ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ವಹಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಯಾವುದೇ ಸಿಬ್ಬಂದಿಗೆ ರಜೆ ನೀಡಬಾರದು ಎಂದು ಸುತ್ತೋಲೆಯಲ್ಲಿ ಹೊರಡಿಸಿದ್ದು, ಕೋವಿಡ್-19 ವರದಿ ಸಲ್ಲಿಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ.
ಸಿಬ್ಬಂದಿಗೆ ರಜೆ ಇಲ್ಲ
ಬಾಕ್ಸ್