ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

Protest
Published on

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಖಂಡಿಸಿ ಮೈಸೂರು ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲೀಕರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಪಶ್ಚಿಮ ಆರ್‌ಟಿಒ ಮುಂಭಾಗದಿಂದ ನ್ಯಾಯಾಲಯದ ಗಾಂಧಿ ಪುತ್ಥಳಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೈಗೆ ಕಪ್ಪು ಬಟ್ಟೆ ಧರಿಸಿ ಉಗ್ರರ ದಾಳಿ ಖಂಡಿಸಿದರಲ್ಲದೆ, ಮೇಣದ ಬತ್ತಿ ಹಚ್ಚಿ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಪೈಶಾಚಿಕ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ನಿಜಕ್ಕೂ ಖಂಡನೀಯ. ಧರ್ಮಾಂಧತೆ ತುಂಬಿಕೊಂಡ ಉಗ್ರರು ಪ್ರವಾಸಿಗರ ಧರ್ಮ ಯಾವುದು ಎಂದು ಕೇಳಿ ಗುಂಡಿಕ್ಕಿದ್ದಾರೆ. ಇಂತಹ ಅಮಾನವೀಯ ಕೃತ್ಯ ಎಸಗಿರುವ ಉಗ್ರರನ್ನು ಸುಮ್ಮನೆ ಬಿಡಬಾರದು. ಕೂಡಲೇ ಕೇಂದ್ರ ಸರ್ಕಾರ ಉಗ್ರರನ್ನು ಪತ್ತೆ ಹಚ್ಚಿ ಅವರನ್ನು ಸದೆ ಬಡಿಯಬೇಕು. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಅಧ್ಯಕ್ಷ ಡಾ.ಆನಂದ್‌ಕುಮಾರ್, ಕಾರ್ಯದರ್ಶಿ ಶ್ರೀನಿವಾಸ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net