ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಸಜ್ಜುಗೊಳಿಸಿ

13NGD1
Published on

ನಂಜನಗೂಡು: ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರುವಂತೆ ಮಕ್ಕಳನ್ನು ಪರೀಕ್ಷೆಗೆ ಈಗಿನಿಂದಲೇ ಸಜ್ಜುಗೊಳಿಸಲು ಶಿಕ್ಷಕರು ಮುಂದಾಗಬೇಕು ಎಂದು ತಹಸೀಲ್ದಾರ್ ಶಿವಮೂರ್ತಿ ತಿಳಿಸಿದರು.


ನಗರದ ಗುರುಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಲಿಕಾಮೃತ ಕಾರ‌್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ತಾಲೂಕು ಹಂತದಲ್ಲಿ ನಡೆಸಲಾಗಿರುವ ಕಲಿಕಾ ಖಾತ್ರಿ ಪರೀಕ್ಷೆಯ ಬಳಿಕ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಗುರ್ತಿಸಿ ಅವರನ್ನು ಪರೀಕ್ಷೆಗೆ ಸಜ್ಜುಗೊಳಿಸಲು ವಿಶೇಷ ಕಲಿಕಾಮೃತ ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಿರುವುದು ಮಕ್ಕಳಿಗೆ ನೆರವಾಗಲಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಮಾತನಾಡಿ, ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಫಲಿತಾಂಶವನ್ನು ಹೆಚ್ಚಿಸುವ ಹಾಗೂ ಗುಣಾತ್ಮಕ ಫಲಿತಾಂಶವನ್ನು ಪಡೆಯುವ ನಿಟ್ಟಿನಲ್ಲಿ ಕಲಿಕಾಮೃತ ಕಾರ‌್ಯಕ್ರಮವನ್ನು ಜಾರಿಗೊಳಿಸಿದ್ದು, ಪ್ರಸಕ್ತ ವರ್ಷ ನಂಜನಗೂಡು ತಾಲೂಕಿನಲ್ಲಿ ಒಟ್ಟು 4611 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇವರಲ್ಲಿ ಸುಮಾರು 550 ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎಂದು ಗುರ್ತಿಸಲಾಗಿದ್ದು, ಈ ವಿದ್ಯಾರ್ಥಿಗಳಿಗಾಗಿ ರೂಪಿಸಿದ ವಿಶೇಷ ಕಾರ್ಯಕ್ರಮವೇ ಕಲಿಕಾಮೃತ. ಪ್ರತಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ತಾಲೂಕಿನ 8 ಕೇಂದ್ರಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ನುರಿತ ಸಂಪನ್ಮೂಲ ಶಿಕ್ಷಕರನ್ನು ನಿಯೋಜಿಸಿ ಮಕ್ಕಳಿಗೆ ಸರಳವಾಗಿ ಕಲಿಯುವಂತೆ ನೋಡಿಕೊಳ್ಳಲಾಗುವುದು ಎಂದರು.

ಕಾರ‌್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಮಹೇಶ್, ಶಿಕ್ಷಣ ಸಂಯೋಜಕ ರಮೇಶ್, ರಾಘವೇಂದ್ರ ಸೇರಿದಂತೆ ಸಂಪನ್ಮೂಲ ಶಿಕ್ಷಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net