

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಏ.2ರಂದು ನಗರದ ಕಲಾಮಂದಿರದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಗೌರವಾಧ್ಯಕ್ಷ ಆರ್. ಮೂರ್ತಿ ತಿಳಿಸಿದರು.
ಅಂದು ಬೆಳಗ್ಗೆ 9.30ಕ್ಕೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗದಿಂದ ವಿವಿಧ ಕಲಾತಂಡಗಳೊಂದಿಗೆ ದೇವರ ದಾಸಿಮಯ್ಯ ಅವರ ಭಾವಚಿತ್ರದ ಮೆರವಣಿಗೆ ಕಲಾಮಂದಿರದವರೆಗೆ ನಡೆಯಲಿದೆ. ಬೆಳಗ್ಗೆ 10ಗಂಟೆಗೆ ಕಲಾಮಂದಿರದಲ್ಲಿ ಶಾಂತಲ ಲಕ್ಷ್ಮೀ ಅವರ ಶ್ರೀ ಶಂಕರಿ ಸುಗಮ ಸಂಗೀತ ತಂಡದವರು ಗೀತಾ ಗಾಯನ ಕರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ 11.30ಕ್ಕೆ ಸಭಾ ಕರ್ಯಕ್ರಮವನ್ನು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಮೈಸೂರು ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಅಘಹರನಂದಾಜೀ ಮಹಾರಾಜ್ ದಿವ್ಯ ಸಾನ್ನಿಧ್ಯವಹಿಸಲಿದ್ದು, ಸಚಿವ ಕೆ.ವೆಂಕಟೇಶ್, ಶಾಸಕ ಅನಿಲ್ ಚಿಕ್ಕಮಾದು, ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಉಪಸ್ಥಿತರಿರಲಿದ್ದಾರೆ. ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆವಹಿಸಲಿದ್ದು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ವಿಧಾನಪರಿಷತ್ ಸದಸ್ಯರುಗಳು, ನಿಗಮ-ಮಂಡಳಿ ಹಾಗೂ ಪ್ರಾಧಿಕಾರದ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ. ಪ್ರಾಧ್ಯಾಪಕ ಡಾ.ಕೆ.ಎಸ್.ಲಕ್ಷ್ಮೀನಾರಾಯಣ ದೇವರ ದಾಸಿಮಯ್ಯ ಅವರ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ನಗರಪಾಲಿಕೆ ಮಾಜಿ ಸದಸ್ಯ ಸುನೀಲ್, ವೀರಭದ್ರ, ಹೇಮಣ್ಣ, ಎಚ್.ಮಂಜುನಾಥ್, ಸುಬ್ರಹ್ಮಣ್ಯ ಇದ್ದರು.