ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ

13HDK01
Published on

ಎಚ್.ಡಿ.ಕೋಟೆ: ತಾಲೂಕಿನಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲು ಕ್ರಮವಹಿಸಲಾಗುತ್ತದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ಬಿರ್ಸಾಮುಂಡಾ ಬುಡಕಟ್ಟು ಸಮಾಜಗಳ ಅಭಿವೃದ್ಧಿ ಮತ್ತು ಸೇವಾ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಬಹುಮಾನ ವಿತರಣೆ ಮಾಡಿ ಮಾತನಾಡಿದರು.


ಪಟ್ಟಣದಲ್ಲಿ ತಾಲೂಕು ಮಟ್ಟದ ಕ್ರೀಡಾಂಗಣ ಇದ್ದು, ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲಾಗಿದೆ. ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮಾಡಲು ಈ ಹಿಂದೆ ಕ್ರೀಡಾ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದ ಒಳಾಂಗಣ ಕ್ರೀಡಾಂಗಣ ಮಾಡುವುದೇ ನನ್ನ ಗುರಿಯಾಗಿದೆ ಎಂದು ತಿಳಿಸಿದರು.


ತಾಲೂಕಿನಲ್ಲಿ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ ಏರ್ಪಡಿಸಿರುವುದು ಖುಷಿ ವಿಚಾರ. ಕರಾಟೆ ಪಟುಗಳಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು. ತಾಲೂಕಿನಿಂದ ರಾಷ್ಟ್ರ ಮಟ್ಟದವರೆಗೆ ಸ್ಪರ್ಧೆ ಮಾಡುವ ಕರಾಟೆ ಪಟುಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ನೌಕರಿ ನೀಡಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.


ಕ್ರೀಡಾ ಇಲಾಖೆಗೆ ಸರ್ಕಾರದ ಅನುದಾನ ಕಡಿಮೆ. ಮುಂದಿನ ದಿನಗಳಲ್ಲಿ ಕ್ರೀಡಾಪಟುಗಳಿಗೆ ಹೊಸ ಯೋಜನೆಗಳನ್ನು ಜಾರಿಗೆ ತರಬೇಕು. ತಾಲೂಕಿನ ಹೆಚ್ಚು ಪ್ರತಿಭಾವಂತ ಮಕ್ಕಳು ಕ್ರೀಡಾಕೂಟದಲ್ಲಿ ಇರುವುದು ಹೆಮ್ಮೆಯ ವಿಚಾರ ಎಂದರು.


ರಾಜ್ಯದ ವಿವಿಧ ಜಿಲ್ಲೆಗಳಿಂದ ಒಂದು ಸಾವಿರಕ್ಕೂ ಹೆಚ್ಚು ಕರಾಟೆಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಪಾರಿತೋಷಕ ವಿತರಣೆ ಮಾಡಲಾಯಿತು. ಸಮಾಜ ಸೇವಕ ಜಿ.ಎನ್.ದೇವದತ್ತ, ಜೆಡಿಎಸ್ ಮುಖಂಡ ಜಯಪ್ರಕಾಶ್, ಪುರಸಭಾ ಸದಸ್ಯ ಎಚ್.ಸಿ.ನರಸಿಂಹಮೂರ್ತಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಿ.ವಿ.ಬಸವರಾಜು, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಬಿ.ಜೆ. ಮಹೇಂದ್ರ, ವೆಂಕಟೇಶ್, ಎಡತೊರೆ ಮಹೇಶ್, ಚಂದ್ರು, ಬೆಟ್ಟಸ್ವಾಮಿ, ಮನೋಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net