ಕನ್ನಡದಲ್ಲೇ ಐಬಿಪಿಎಸ್ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಿ

Kannada_Sahitya_Parishat
Published on

ಬೆಂಗಳೂರು : ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಗೆಳೆಯರ ಬಳಗವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಮುಂದಿನ ವರ್ಷ ಜನವರಿಯಲ್ಲಿ ನಡೆಯಲಿರುವ ಐಬಿಪಿಎಸ್ ಪೂರ್ವಬಾವಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಸಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕ್ರಮದಿಂದ ಸಂವಿಧಾನ ಸ್ಥಾನಮಾನ ಹೊಂದಿರುವ ಕನ್ನಡವೂ ಸೇರಿ ಎಲ್ಲ ಪ್ರಾದೇಶಿಕ ಭಾಷೆಗಳಿಗೂ ಹಾಗೂ ಭಾಷಿಕರಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ. ಕನ್ನಡದಲ್ಲಿ ಐಬಿಪಿಎಸ್ ಪರೀಕ್ಷೆ ನಡೆಸುವಂತೆ ಕೋರಿ ಕೇಂದ್ರದ ಮೇಲೆ ರಾಜ್ಯ ಸರ್ಕಾರವು ಒತ್ತಡ ತರಬೇಕು ಎಂದು ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಮನವಿ ಮಾಡಿದ್ದಾರೆ.

ಐಬಿಪಿಎಸ್ ಪರೀಕ್ಷೆಯನ್ನು ಕನ್ನಡ ಸೇರಿ 13 ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಹಿಂದೆ ಭರವಸೆ ನೀಡಿದ್ದರು. ಆದರೆ, ಅವರು ನೀಡಿರುವ ಭರವಸೆ ಇದೀಗ ಹುಸಿಯಾಗಿದೆ. ಈ ನೇಮಕಾತಿ ಪರೀಕ್ಷೆಯನ್ನು ಷೆಡ್ಯೂಲ್-8ರಲ್ಲಿರುವ ಎಲ್ಲ ಭಾಷೆಗಳಲ್ಲೂ ನಡೆಸಲು ಅವಕಾಶ ನೀಡಬೇಕು ಎಂದು ಬಳಗ ಮನವಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net