

ತಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ ಫೆ. 10 ರಿಂದ 12 ರವರೆಗೆ ‘ಕುಂಭಮೇಳ-2025’ ಹಮ್ಮಿಕೊಳ್ಳಲಾಗಿದ್ದು, ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಕುಂಭ ಮೇಳ ಆಚರಣೆಯ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಂಭ ಮೇಳ ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು. ಇದು 3 ವರ್ಷಗಳಿಗೊಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆಎಸ್‌ಆರ್‌ಟಿಸಿ ವತಿಯಿಂದ ವಿವಿಧ ಭಾಗಗಳಿಗೆ ಹೆಚ್ಚಿನ ಬಸ್‌ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಆರತಿಯನ್ನು ಫೆಬ್ರವರಿ 11ರಂದು ಮಾಡಲಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಛತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಛತೆ ಕಾಪಾಡಬೇಕು ಎಂದು ಸೂಚನೆ ನೀಡಿದರು. ಫೈರ್‌ಸೇಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತಮವಾಗಿರುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಕೋವಿಡ್ ಕಾರಣ 2021ರಲ್ಲಿ ಕುಂಭಮೇಳ ನಡೆಯಲಿಲ್ಲ. ನದಿಯಲ್ಲಿ ಸ್ನಾನ ಮಾಡಲು 5 ಕಡೆ ಜಾಗ ಗುರುತಿಸಲಾಗಿದೆ. 1 ಯಾಗ ಶಾಲೆ ನಿರ್ಮಾಣ ಮಾಡಲಾಗುವುದು. 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಇತರರಿದ್ದರು.