

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಭಿಷ್ವಾದೇಬ್ ದಾಸ್(೩೬) ಮೃತಪಟ್ಟವರು. ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಟರ್ಮಿನಲ್ ೨ಎ ೪ನೇ ಪ್ಲಾಟ್‌ಫಾರ್ಮ್‌ನಲ್ಲಿ ಸೋಮವಾರ ಮುಂಜಾನೆ ೪.೪೦ಕ್ಕೆ ಈ ದುರ್ಘಟನೆ ನಡೆದಿದೆ.
ಮೃತ ಭಿಷ್ವಾದೇಬ್ ದಾಸ್ ಶಿವಮೊಗ್ಗದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ. ಭಾನುವಾರ ರಾತ್ರಿ ಶಿವಮೊಗ್ಗದಿಂದ ಹೊರಟು ಸೋಮವಾರ ಮುಂಜಾನೆ ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಾನೆ. ಈ ವೇಳೆ ನಾಲ್ಕನೇ ಪ್ಲಾಟ್ ಫಾರ್ಮ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಚಾಲಕನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಈ ಸಂಬಂಧ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.