ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ

03-GPT-2A
Published on

ಗುಂಡ್ಲುಪೇಟೆ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ದುರಾಡಳಿತ ಮತ್ತು ಭ್ರಷ್ಟಾಚಾರಗಳನ್ನು ಮುಂದಿಟ್ಟುಕೊಂಡು ಜನತೆಯ ಮುಂದೆ ಮತಯಾಚನೆ ಮಾಡುವುದಾಗಿ ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.


ತಾಲೂಕಿನ ಹೊಣಕನಪುರ ಸಮೀಪದ ಓಂಕಾರ ಸಿದ್ದೇಶ್ವರ ದೇವಸ್ಥಾನದಲ್ಲಿ ಸೋಮವಾರ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಿ ಅವರು ಮಾತನಾಡಿದರು. ತಂದೆ ಎಚ್.ಎಸ್.ಮಹದೇವಪ್ರಸಾದ್, ತಾಯಿ ಗೀತಾ ಮಹದೇವಪ್ರಸಾದ್ ಅವಧಿಯಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗಿದೆ. ಕಳೆದ ಐದು ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಬದಲಾಗಿ ಭ್ರಷ್ಟಾಚಾರ ಮಾತ್ರ ವ್ಯಾಪಕವಾಗಿದ್ದು ಜನತೆ ಬೇಸತ್ತಿದ್ದಾರೆ. ಇದು ನನ್ನ ಮೊದಲ ಚುನಾವಣೆಯಾಗಿದ್ದು ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತರು ಬಹಳ ಹುಮ್ಮಸಿನಲ್ಲಿದ್ದು ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಧನೆಗಳು, ಗ್ಯಾರಂಟಿ ಯೋಜನೆಗಳ ಬಗ್ಗೆ ಮತದಾರರಿಗೆ ಅರಿವು ಮೂಡಿಸುವ ಮೂಲಕ ಮತಯಾಚನೆ ಮಾಡಲಾಗುವುದು ಎಂದು ಹೇಳಿದರು.


ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಶ್ರಮಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್ ತನ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ನೀಡಿದೆ ಎಂದರು.


ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡ ಪ್ರಸಾದ್, ಎಪಿಎಂಸಿ ಸದಸ್ಯದಾರ ಆರ್.ಎಸ್.ನಾಗರಾಜು, ಮಂಚಹಳ್ಳಿ ಮೂರ್ತಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಚ್.ಎನ್.ಬಸವರಾಜು, ಎಸ್.ಎಸ್.ಮಧುಶಂಕರ್, ಜಗದೀಶಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಎಸ್.ಮಹೇಶ್, ಬಿ.ಕೆ.ಬೊಮ್ಮಯ್ಯ, ಚೆನ್ನಪ್ಪ, ಮುಖಂಡರಾದ ನೀಲಕಂಠಪ್ಪ, ಗಣೇಶ ಪ್ರಸಾದ್ ಪತ್ನಿ ವಿದ್ಯಾ ಇದ್ದರು. ನಂತರ ಬೂತ್ ಸಂಖ್ಯೆ 1ರ ಹೊಸಪುರ, ಶ್ರೀಕಂಠಪುರ, ಯಡವನಹಳ್ಳಿ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net