ಚಿಕಿತ್ಸೆಗೆ ಸ್ಪಂದಿಸದೆ ಮಹಿಳೆ ಸಾವು

Crime_20250705000308129.jpg
Published on

ಮೈಸೂರು: ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವಕನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಪೂರ್ಣಿಮಾ(36) ಮೃತಪಟ್ಟಿದ್ದು, ಆರೋಪಿ ಅಭಿಷೇಕ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೃಷ್ಣಮೂರ್ತಿಪುರಂನಲ್ಲಿರುವ ಪಾರ್ಕ್ ಮುಂಭಾಗದಲ್ಲಿ ಅಭೀಷೇಕ್ ಎಂಬ ಯುವಕ ಪೂರ್ಣಿಮಾಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಪೂರ್ಣಿಮಾಳನ್ನು ಪ್ರೀತಿ ಮಾಡುವಂತೆ ಅಭಿಷೇಕ್ ಒತ್ತಾಯಿಸಿದ್ದ. ಆಕೆ ನಿರಾಕರಿಸಿದ್ದಾಳೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದ್ದು, ಆಗ ಯುವಕ ಏಕಾಏಕಿ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ.

ಆಕೆಯ ತಲೆ, ಕುತ್ತಿಗೆ, ಹೊಟ್ಟೆಗೆ ಗಂಭೀರ ಗಾಯಗಳಾಗಿತ್ತು. ನಂತರ ಯುವಕನೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿ ಅಲ್ಲಿಂದ ಪರಾರಿಯಾಗಿದ್ದ. ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದ ಅಭಿಷೇಕ್ ಆಕೆಗೆ ತಾಳಿ ಕಟ್ಟಿದ್ದ. ಆಕೆಯ ಮೊಬೈಲ್‌ನಲ್ಲಿಯೇ ಫೋಟೋ ತೆಗೆದು ವಾಟ್ಸಾಪ್ ಸ್ಟೇಟಸ್‌ಗೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net