

ಎನ್.ಆರ್.ಪುರ: ರಚನಾತ್ಮಕ ವಿಪಕ್ಷವಾಗಿ ಕಾರ್ಯನಿರ್ವಹಿಸಲು ವಿಫಲವಾಗಿರುವ ಬಿಜೆಪಿಗೆ ವಿಚಾರಗಳೇ ಇಲ್ಲವಾಗಿದೆ. ಬಡವರ ಬದುಕು ಸುಧಾರಿಸಲು ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಪಿ.ಅಂಶುಮಂತ್ ಆರೋಪಿಸಿದರು.
ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ, ಶಕ್ತಿ ಯೋಜನೆಯ ಸೌಲಭ್ಯಗಳು ಪಾರದರ್ಶಕವಾಗಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿರುವುದು ಬಿಜೆಪಿಗರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ಘೋಷಣೆ ಮಾಡಿರುವ ಬಗ್ಗೆ ಚಕಾರ ಎತ್ತದ ಬಿಜೆಪಿಗರು ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಯೋಜನೆ ಘೋಷಿಸಿ 4 ತಿಂಗಳಲ್ಲಿಯೇ ಹಿಂದಕ್ಕೆ ಪಡೆದಿದ್ದುದಕ್ಕೆ ಉತ್ತರಿಸಲಿ ಎಂದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜತೆಯಲ್ಲಿ ಆರೋಗ್ಯ, ಶಿಕ್ಷಣ, ಮಹಿಳೆಯರ ಸುರಕ್ಷತೆಗೆ ಆದ್ಯತೆ, ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದು ಉತ್ತಮ ಆಡಳಿತ ನಡೆಸುತ್ತಿದೆ. ಜಿಲ್ಲೆಯಲ್ಲಿ ಮತ್ತು ಕ್ಷೇತ್ರದಲ್ಲಿ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಅವರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವುದನ್ನು, ಜಿಲ್ಲೆಯ ಹಲವು ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯಕ್ರಮ ರೂಪಿಸಿರುವುದನ್ನು ಸಹಿಸಿಕೊಳ್ಳಲಾರದೆ ಬಿಜೆಪಿಯವರು ಅಪಪ್ರಚಾರದಲ್ಲಿ ತೊಡಗಿದ್ದಾರೆಂದು ದೂರಿದರು.
ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಜಿಲ್ಲೆಯ ಕಂದಾಯ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ನಿವೇಶನ ಮತ್ತು ಭೂಮಿಯ ಹಕ್ಕು ಕೊಡುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದಾರೆ. ಪ್ಲಾಂಟೇಷನ್ ಬೆಳೆಗಳ ಜಮೀನು ಗುತ್ತಿಗೆ ನೀಡಲು ಬೆಳೆಗಾರರು ಅರ್ಜಿ ಸಲ್ಲಿಸಲು ಜು.15ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ಮುಖಂಡರಾದ ಗೇರುಬೈಲು ನಟರಾಜ್, ಪಿ.ಆರ್.ಸದಾಶಿವ, ಎಸ್.ಡಿ.ರಾಜೇಂದ್ರ, ಇ.ಸಿ.ಜೋಯಿ, ಜುಬೇದಾ, ದೇವಂತ್, ಅಂಜುಮ್, ಸುನಿಲ್ಕುಮಾರ್, ನಂದೀಶ್, ಜಯಂತ್, ಅಭಿಲಾಷ್ ಇದ್ದರು.