ಜಾನತಾದಳ(ಜಾತ್ಯತೀತ) ಪಕ್ಷವನ್ನು ಬೇರು ಮಟ್ಟದಿಂದ ಕಟ್ಟಲು ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಿ

JDS RoadShow
Published on

ಜಾನತಾದಳ(ಜಾತ್ಯತೀತ) ಪಕ್ಷವನ್ನು ಬೇರು ಮಟ್ಟದಿಂದ ಕಟ್ಟಲು ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ ಹೇಳಿದರು.

ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಜಿಲ್ಲಾ ಜಾನತಾದಳ ಪಕ್ಷದ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಚಾಮರಾಜ ವಿಧಾನ ಸಭಾ ಕ್ಷೇತ್ರದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಕ್ಷ ಸಂಘಟಿಸುವ ದೃಷ್ಟಿಯಿಂದ ಕೇಂದ್ರ ಸಚಿವರೂ ಆದ ಜಾ.ದಳ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯಾದಾದ್ಯಂತ ಸದಸ್ಯತ್ವ ನೋಂದಣಿಗೆ ಆದೇಶ ಕೊಟ್ಟಿರುವ ಹಿನ್ನೆಲೆಯಲ್ಲಿ ಸದಸ್ಯತ್ವ ಅಭಿಯಾನ ಆಯೋಜಿಸಲಾಗಿದೆ. ನಮ್ಮ ಕಾರ್ಯಕರ್ತರು ಹೆಚ್ಚಿನ ಸದಸ್ಯತ್ವ ನೋಂದಣಿ ಮಾಡಿಸಿ ಅವರ ಕೈ ಬಲಪಡಿಸಬೇಕು ಎಂದರು.

ಪಕ್ಷದ ಸಂಘಟನೆ ಮತ್ತು ಶಕ್ತಿ ಹೆಚ್ಚಿಸಿಕೊಳ್ಳಲು ಪಕ್ಷದ ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸಬೇಕು. ಆ ಮೂಲಕ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಬೇಕು. ಈಗಾಗಲೇ ಎನ್.ಆರ್.ಕ್ಷೇತ್ರದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಆರಂಭವಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರ ಅಧಿಕಾರ ಅವಧಿಯಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಕಾಂಗ್ರೆಸ್‌ನ ಜನ ವಿರೋಧಿ ನೀತಿಗಳನ್ನು ಜನತೆಗೆ ತಿಳಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಪಕ್ಷದ ಸದಸ್ಯರಾಗಲು ಬಯಸುವ ಎಲ್ಲರಿಗೂ ರಾಜ್ಯ ಸಮಿತಿಯಿಂದ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ಪಡೆಯಬೇಕೆಂದರೆ ನಮ್ಮ ಕಾರ್ಯಕರ್ತರು ಮತ್ತು ಮುಖಂಡರು ಸದಸ್ಯತ್ವವನ್ನು ಹೆಚ್ಚು ಮಾಡಬೇಕು. ಈ ನಿಟ್ಟಿನಲ್ಲಿ ಪ್ರತಿ ವಾರ್ಡ್‌ನಲ್ಲಿಯೂ 25 ಬೂತ್ ಕಮಿಟಿಗಳನ್ನು ರೂಪಿಸಬೇಕು ಎಂದು ಹೇಳಿದರು.

ಪಕ್ಷದ ಚಾಮರಾಜ ಕ್ಷೇತ್ರದ ಅಧ್ಯಕ್ಷ ಪಿ.ಮಂಜುನಾಥ್ ಮಾತನಾಡಿ, ಕ್ಷೇತ್ರದಲ್ಲಿ ಸದಸ್ಯತ್ವ ನೋಂದಣಿ ಮತ್ತು ಬೂತ್ ಅಭಿಯಾನ ಪ್ರಾರಂಭಿಸಿದ್ದು, ಪ್ರತಿ ವಾರ್ಡಿಗೆ ಬೂತ್ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಬೇಕು. ಒಂದು ಬೂತ್‌ನಲ್ಲಿ ಕಡ್ಡಾಯವಾಗಿ 12 ಜನ ಇರಬೇಕು. ಜೊತೆಗೆ ಕನಿಷ್ಠ 120 ಮಂದಿ ಕಾರ್ಯಕರ್ತರ ಕಮಿಟಿ ರಚಿಸಬೇಕು. ಆ ಮೂಲಕ ಪಕ್ಷ ಸಂಘಟನೆಗೆ ಶಕ್ತಿ ತುಂಬಬೇಕು ಎಂದು ಹೇಳಿದರು.

ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಶಂಕರೇಗೌಡ, ನಗರ ಪಾಲಿಕೆ ಮಾಜಿ ಸದಸ್ಯರಾದ ಬಾಲು, ರಮೇಶ್, ಲಕ್ಷ್ಮೀ ಶಿವಣ್ಣ, ಮುಖಂಡರಾದ ಉಮಾ ಶಂಕರ್, ಬೋರೆಗೌಡ, ಶಿವಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net