ಜೆಡಿಎಸ್-ಕಾಂಗ್ರೆಸ್ ಮೈತ್ರಿ ಜಟಾಪಟಿ

Published on

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಜಟಾಪಟಿ
-ಜೆಡಿಎಸ್ ಜತೆ ಮೈತ್ರಿ ಇಲ್ಲ-ಕಾಂಗ್ರೆಸ್
-ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ-ಕುಮಾರಸ್ವಾಮಿ
-ಆಖಾಡದಲ್ಲಿ ಕುಸುಮಾ ಮೂಡಿಸಿರುವ ಕುತೂಹಲ

ವಿಜಯವಾಣಿ ಸುದ್ದಿಜಾಲ ಬೆಂಗಳೂರು
ರಾಜರಾಜೇಶ್ವರಿ ನಗರ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಬೇಕು ಎಂಬ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಹೇಳಿಕೆ ಬೆನ್ನಲ್ಲೇ ಉಭಯ ಪಕ್ಷಗಳ ನಡುವೆ ಮೈತ್ರಿ ಚರ್ಚೆ ತಾರಕಕ್ಕೇರಿದೆ.  
ಮುನಿರತ್ನ ಸೋಲಿಸುವುದೇ ತಮ್ಮ ಗುರಿಯಾಗಿದ್ದು, ಕಾಂಗ್ರೆಸ್, ಜೆಡಿಎಸ್ ಒಮ್ಮತದ ಅಭ್ಯರ್ಥಿ ಹಾಕಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡರಿಗೆ ಹೇಳಿರುವುದಾಗಿ ಹನುಮಂತರಾಯಪ್ಪ ತಿಳಿಸಿದ್ದಾರೆ. ಜತೆಗೆ ಮಗಳು ಕುಸುಮಾಳನ್ನು ಅಭ್ಯರ್ಥಿ ಮಾಡುವ ಕುರಿತೂ ಮನೆಯಲ್ಲಿ ಚರ್ಚೆ ನಡೆದಿದೆ. ಆಕೆ ಸ್ಪರ್ಧೆಗೆ ಒಪ್ಪಿದರೆ ನಾನು ಬೆಂಬಲಿಸುತ್ತೇನೆ ಎಂದು ತಿಳಿಸಿದ್ದಾರೆೆ. ಅಲ್ಲದೆ, ಆದಿಚುಂಚನಗಿರಿ ಪೀಠದ ನಿರ್ಮಲಾನಂದನಾಥ ಮಹಾಸ್ವಾಮೀಜಿಗಳನ್ನು ಮಗಳೊಂದಿಗೆ ಭೇಟಿ ಮಾಡಿ ಆಶೀರ್ವಾದ ಪಡೆದಿರುವುದು ಕೂಡ ತರಹೇವಾರಿ ಚರ್ಚೆಗೆ ಗ್ರಾಸವಾಗಿದೆ.
ಈ ಎಲ್ಲ ವಿದ್ಯಮಾನಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಉಪ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  
ಕಾಂಗ್ರೆಸ್ ಮೈತ್ರಿಗೆ ಯೋಗ್ಯವಲ್ಲ:
ಕಾಂಗ್ರೆಸ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಮುಂದೆ ಮೈತ್ರಿ ಪ್ರಸ್ತಾಪವನ್ನು ಜೆಡಿಎಸ್‌ನಿಂದ ಯಾರಿಟ್ಟಿದ್ದಾರೆ ಎಂದು ಕೈ ನಾಯಕರಿಗೆ ಎಚ್‌ಡಿಕೆ ಪ್ರಶ್ನಿಸಿದ್ದಾರೆ.
ಜೆಡಿಎಸ್ ಜತೆ ಮೈತ್ರಿ ಇಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಗಮನಿಸಿದ್ದೇನೆ. ಕಾಂಗ್ರೆಸ್ ಜತೆಗೆ  ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್‌ನಿಂದ ಮುಂದಿಟ್ಟಿರುವುದಾದರೂ ಯಾರು?
ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ:
2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ನಾಯಕರು ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕಾಂಗ್ರೆಸ್ ಕೆಡವಿದೆ. ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿಎಸ್‌ಪಿ ಶಾಸಕರನ್ನು ಸೆಳೆದಿದೆ. ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಕಾಂಗ್ರೆಸ್ ವರ್ತನೆ ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ ಎಂದು ತಿವಿದಿದ್ದಾರೆ.
ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ. ಮೈತ್ರಿ ಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್‌ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್- ಜೆಡಿಎಸ್ ಎಂಬ ಭಾವನೆಯೂ ಬೇಡ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net