ಟೈರ್ ಅಂಗಡಿಯಲ್ಲಿ ಬೆಂಕಿ ಅವಘಡ

kmt Fire
Published on

ಬೆಂಗಳೂರು: ಜೆ.ಸಿ.ರಸ್ತೆಯಲ್ಲಿರುವ ಟೈರ್ ಹಾಗೂ ಬೇರಿಂಗ್ ಅಂಗಡಿಯಲ್ಲಿ ಶನಿವಾರ ತಡರಾತ್ರಿ ಬೆಂಕಿ ಅವಘಡ ನಡೆದಿದ್ದು, ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿ ಆಗಿವೆ.

ವಿಷಯ ತಿಳಿದು ೫ ವಾಹನದಲ್ಲಿ ಬಂದ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಜೆ.ಸಿ.ರಸ್ತೆಯಲ್ಲಿರುವ ಟೈರ್ ಅಂಗಡಿಯೊಂದರಲ್ಲಿ ಶನಿವಾರ ತಡರಾತ್ರಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಅಂಗಡಿಯಲ್ಲಿದ್ದ ಟೈರ್‌ಗಳು ಮತ್ತು ಬೇರಿಂಗ್ ಹಾಗೂ ಇನ್ನಿತರ ವಸ್ತುಗಳಿಗೆ ಹಾನಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮೊದಲು ಸಣ್ಣದಾಗಿ ಕಾಣಿಸಿಕೊಂಡಿದ್ದ ಬೆಂಕಿ ನಂತರ ಇಡೀ ಅಂಗಡಿಗೆ ವ್ಯಾಪಿಸಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅವಘಡ ನಡೆದ ವೇಳೆ ಅಲ್ಲಿ ಯಾವ ಸಿಬ್ಬಂದಿ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಭಾನುವಾರ ಮಧ್ಯಾಹ್ನ ಕೂಡ ಹೊಗೆ ಕಾಣಿಸಿಕೊಂಡಿದ್ದರಿಂದ ಒಂದು ಅಗ್ನಿಶಾಮಕ ವಾಹನ ಸ್ಥಳದಲ್ಲಿ ಇರಿಸಲಾಗಿದೆ ಎಂದು ಅಗ್ನಿಶಾಮಕ ದಳ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net