

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಅವರು ವರ್ಗಾವಣೆ ಆಗಿದ್ದು ಅವರ ಸ್ಥಾನಕ್ಕೆ ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಡಾ. ಕವಿತಾ ಯೋಗಪ್ಪನವರ್ ಅವರನ್ನು ನಿಯುಕ್ತಿಗೊಳಿಸಿ ಶನಿವಾರ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮಕಾರಂತ ಬಡಾವಣೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಕವಿತಾ ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ವರ್ಗಾಯಿಸಿ ಆದೇಶಿಸಲಾಗಿದೆ.
ಕಳೆದೆರಡು ವರ್ಷಗಳಿಂದ ಆಯುಕ್ತರಾಗಿದ್ದ ಮಾಯಣ್ಣಗೌಡ ಅವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮಾಯಣ್ಣಗೌಡ ಅವರು ಪಾಲಿಕೆ ಆಯುಕ್ತರ ಜತೆಗೆ ಶಿವಮೊಗ್ಗ ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕೆಲಸ ನಿರ್ವಹಿಸಿದ್ದರು.