ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ

02BTP01
Published on

ಬೆಟ್ಟದಪುರ: ತಂಬಾಕು ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಆಗಿರುವುದರಿಂದ ಅವುಗಳಿಂದ ದೂರವಿರುವಂತೆ ಕೋಮಲಾಪುರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀವಲ್ಲಿ ತಿಳಿಸಿದರು.
ಬೆಟ್ಟದಪುರ ಸಮೀಪದ ಕೋಮಲಾಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹುಣಸವಾಡಿ ವಲಯದ ಗುರುವಾರ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆರೋಗ್ಯ ಇಲಾಖೆಯಿಂದ ಈ ಬಾರಿ ತಂಬಾಕು ಬೇಡ ಆಹಾರ ಬೇಕು ಎಂಬ ಘೋಷವಾಕ್ಯದೊಂದಿಗೆ ತಂಬಾಕು ಉತ್ಪನ್ನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಸಂಸ್ಥೆಯ ಪಿರಿಯಾಪಟ್ಟಣ ವಲಯ ಯೋಜನಾಧಿಕಾರಿ ಸುರೇಶ್ ಶೆಟ್ಟಿ ಸಂಸ್ಥೆ ವತಿಯಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ತಂಬಾಕು ಹಾಗೂ ಅದರ ಉತ್ಪನ್ನಗಳ ಸೇವನೆಯಿಂದ ಮಾರಣಾಂತಿಕ ಕಾಯಿಲೆಗಳು ಬರುವುದರಿಂದ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿರುವಂತೆ ಕೋರಿದರು. ಸಂಸ್ಥೆಯ ವಲಯ ಮೇಲ್ವಿಚಾರಕಿ ಶೀಲಾ, ಕೃಷಿ ಅಧಿಕಾರಿ ಹರೀಶ್, ಗ್ರಾಮದ ಮುಖಂಡ ಬಸವಲಿಂಗಪ್ಪ, ಸೇವಾ ಪ್ರತಿನಿಧಿ ಶಶಿಕುಮಾರ್, ಒಕ್ಕೂಟಗಳ ಪದಾಧಿಕಾರಿಗಳು ಹಾಗೂ ಮಹಿಳಾ ಸಂಘದ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net