

ನಂಜನಗೂಡು: ತಾಲೂಕಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿನ ಪಂಚಾಯತಿಗಳಲ್ಲಿ ಅಧಿಕಾರ ಹಿಡಿದಿದ್ದು, ಮುಂಬರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಗಳಿಸಬೇಕಾದರೆ ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಪಕ್ಷದ ಕಾರ್ಯಕರ್ತರು ಮುಂದಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ನಗರದ ನಂದಿ ಕನ್ವೇಷನ್‌ಹಾಲ್‌ನಲ್ಲಿ ಶುಕ್ರವಾರ ನಂಜನಗೂಡು ಹಾಗೂ ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ನೂತನ ಗ್ರಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರುಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ಷೇತ್ರದ 26 ಗ್ರಾ.ಪಂ.ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 18 ಗ್ರಾ.ಪಂ.ಗಳಲ್ಲಿ ಅಧಿಕಾರಕ್ಕೆ ಬಂದಿರುವುದು ಸಂತಸದ ಸಂಗತಿಯಾಗಿದೆ. ಜತೆಗೆ ಅತ್ಯಂತ ಹೆಚ್ಚಿನ ಸಂಖ್ಯೆಯ ಗ್ರಾ.ಪಂ. ಸದಸ್ಯರುಗಳನ್ನು ಕಾಂಗ್ರೆಸ್ ಹೊಂದಿದೆ. ಹೀಗಾಗಿ ಮುಂಬರುವ ತಾ.ಪಂ. ಹಾಗೂ ಜಿ.ಪಂ. ಚುನಾವಣೆಗಳಿಗೆ ಗ್ರಾ.ಪಂ. ಸದಸ್ಯರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.
ನೂತನ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು ತಮಗೆ ದೊರೆತಿರುವ ಅಧಿಕಾರವನ್ನು ಜನರ ಸೇವೆಗಾಗಿ ಬಳಸುವ ಮೂಲಕ ತಮ್ಮ ತಮ್ಮ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದರು.