

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಚಂದ್ರಶೇಖರ್ ಹೇಳಿದರು.
ಧ್ಯಾನ್ ಚಂದ್ ಹುಟ್ಟುಹಬ್ಬದ ಅಂಗವಾಗಿ ಶನಿವಾರ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಕಿ ಮಾಂತ್ರಿಕ ಎಂದೇ ಹೆಸರಾಗಿದ್ದ ಧ್ಯಾನಚಂದ್ ಅವರು ಮೂರು ಬಾರಿ ಚಿನ್ನದ ಪದಕ ಗಳಿಸುವ ಮೂಲಕ ನಮ್ಮ ದೇಶದ ರಾಷ್ಟ್ರೀಯ ಕ್ರೀಡೆ ಹಾಕಿಯ ಶ್ರೇಷ್ಠ ಆಟಗಾರನೆಂದು ಗುರುತಿಸಿಕೊಂಡು ವಿಶ್ವವೇ ಕೊಂಡಾಡುವಂತಹ ಸಾಧನೆ ಮಾಡಿದ್ದರು. ಇವರಿಗೆ ಭಾರತ ಸರ್ಕಾರ 1956ರಲ್ಲಿ ಪದ್ಮಭೂಷಣ ಪ್ರಶಸ್ತಿ ಕೊಟ್ಟು ಗೌರವಿಸಿತ್ತು. ಇತ್ತೀಚಿನ ದಿನಗಳಲ್ಲಿ ನಮ್ಮ ಕ್ರೀಡಾಪಟುಗಳು ಒಲಿಂಪಿಕ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶದ ಕೀರ್ತಿ ಹೆಚ್ಚಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವರ್ಷ ಫೆಬ್ರವರಿಯಲ್ಲಿ ನೇಪಾಳದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿ ಅಭಿಷೇಕ್ ಹಾಗೂ ಶಾಟ್‌ಪುಟ್‌ನಲ್ಲಿ ವಿಜೇತರಾದ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಪ್ರಾಂಶುಪಾಲ ಡಾ.ಮದನ್ ಕುಮಾರ್, ಅಧ್ಯಾಪಕರಾದ ಪ್ರೊ.ಕೆ.ಚಾಮರಾಜು, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜಯ್ ಕುಮಾರ್, ಶಿವಸ್ವಾಮಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮುಖ್ಯಸ್ಥ ತುಳಸಿರಾಮ್, ನಾರಾಯಣ್, ರಮೇಶ್, ಅನ್ನಪೂರ್ಣಮ್ಮ ಇತರರು ಇದ್ದರು.