ಬೆಂಗಳೂರು: ಫೇಸ್‌ಬುಕ್‌ನಲ್ಲಿ ಅವಹೇಳನಾಕಾರಿ ಅಂಶವಿರುವ ಪೋಸ್ಟ್ ಪ್ರಕಟಿಸಿ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಗೆ ಕಾರಣನಾದ ಪ್ರಮುಖ ಆರೋಪಿ ನವೀನ್‌ಗೆ ಜಾಮೀನು ನೀಡಲು ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.
ಆರೋಪಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 60ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿದ್ಯಾಧರ ಶಿರಹಟ್ಟಿ ಅವರು, ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇನ್ನೂ ತನಿಖಾ ಹಂತದಲ್ಲಿದೆ. ಈ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡುವುದು ಸಮಂಜಸವಲ್ಲ ಎಂದು ಅಭಿಪ್ರಾಯ ಪಟ್ಟು ಅರ್ಜಿ ವಜಾಗೊಳಿಸಿದ್ದಾರೆ.
ಅರ್ಜಿದಾರ ಫೇಸ್‌ಬುಕ್‌ನಲ್ಲಿ ಅವಹೇಳನಾಕರಿ ಹೇಳಿಕೆ ಪ್ರಕಟಿಸಿ ಒಂದು ಸಮುದಾಯದ ಭಾವನೆಗಳಿಗೆ ಘಾಸಿಯಾಗುವಂತೆ ಮಾಡಿದ್ದಾರೆ. ಇದೇ ಕಾರಣದಿಂದ ಪುಲಕೇಶಿನಗರ ಶಾಸಕರ ಮನೆ ಮೇಲೆ ದಾಳಿ ನಡೆದಿದೆ. ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳಲ್ಲಿ 67 ಎ್ಐಆರ್‌ಗಳು ದಾಖಲಾಗಿದ್ದು, ಪ್ರಕರಣದಲ್ಲಿ ಹಲವು ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸ್ ಸಿಬ್ಬಂದಿ ಮತ್ತು ಸಾರ್ವಜನಿಕರ ನಡುವೆ ಘರ್ಷಣೆಯಾಗಿದೆ. ನೂರಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಪ್ರಕರಣ ಇನ್ನೂ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜಾಮೀನು ನೀಡಿದಲ್ಲಿ ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆಯಿದೆ. ಆದ್ದರಿಂದ ಜಾಮೀನು ನಿರಾಕರಿಸಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಇತರರಿಗೂ ಜಾಮೀನು ನಿರಾಕರಣೆ:
ಡಿ.ಜೆ. ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧನಕ್ಕೊಳಾಗಿರುವ ಮೊಹಮ್ಮದ್ ಶಾಹಿದ್ ಸೇರಿದಂತೆ ಇತರೆ ಐದು ಜನ ಆರೋಪಿತರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು 73ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಅರ್ಜಿದಾರರ ವಿರುದ್ಧ ಪೊಲೀಸ್ ಠಾಣೆ ಮತ್ತು ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟವಾಗುವಂತೆ ವರ್ತಿಸಿರುವ ಆರೋಪವಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರೆದಿದ್ದು, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ನ್ಯಾಯಾಧೀಶರು ಅರ್ಜಿಗಳನ್ನು ವಜಾ ಮಾಡಿ ಆದೇಶಿಸಿದ್ದಾರೆ.
ಆರೋಪಿಗಳಾದ ಅಸೀಮ್ ಪಾಷಾ, ಉಮ್ರೇಜ್ ಷರೀಫ್, ತಬರೇಜ್ ಪಾಷಾ, ಮೊಹಮ್ಮದ್ ಇಫ್ತಿಕರ್, ಮೊಹಮ್ಮದ್ ಸಾಧಿಕ್ ಜಾಮೀನು ಕೋರಿ ಅರ್ಜಿಗಳನ್ನು ಸಲ್ಲಿಸಿದ್ದರು.