

ಬಾಳೆಹೊನ್ನೂರು: ಪಟ್ಟಣದ ನಾಡಕಚೇರಿ ಕಟ್ಟಡ ಶಿಥಿಲಗೊಂಡಿದ್ದು ಕುಸಿದು ಬೀಳುವ ಆತಂಕದಲ್ಲಿದೆ. ಈ ಹಿನ್ನೆಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಮಂಜೂರು ಮಾಡಿ ಹೊಸ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಪಟ್ಟಣದಲ್ಲಿ ನೂತನ ನಾಡಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಈ ಹಿಂದೆ ಇದೇ ಜಾಗದಲ್ಲಿ ನೂತನ ಕಟ್ಟಡ ನಿರ್ಮಿಸಲು ಯೋಜಿಸಲಾಗಿತ್ತು. ಆದರೆ ಕ್ರೀಡಾಪಟುಗಳ ಆಕ್ಷೇಪದಿಂದ ಕಾಮಗಾರಿ ನಿರ್ವಹಿಸಲು ಆಗಿರಲಿಲ್ಲ.
ಇದೀಗ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನೂತನ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಿದ್ದು ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು. ಪ್ರಸ್ತುತ ಇರುವ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಅದೇ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದೆ. ತಾತ್ಕಾಲಿಕವಾಗಿ ನಾಡಕಚೇರಿ ಕಟ್ಟಡ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕಾರ್ಯನಿರ್ವಹಿಸಲಿದೆ ಎಂದರು.
ಪಟ್ಟಣದ ಜೇಸಿ ವೃತ್ತದಿಂದ ವಿಜಯಮಾತೆ ಚರ್ಚ್‌ವರೆಗೆ 30 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗುವುದು. ಇದಕ್ಕೂ ಸಹ ಶಂಕುಸ್ಥಾಪನೆ ನೆರವೇರಿಸಿದ್ದು ಶೀಘ್ರದಲ್ಲಿಯೇ ಕಾಮಗಾರಿ ಆರಂಭಗೊಳ್ಳಲಿದೆ. ಈ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂಬುದು ಸಾರ್ವಜನಿಕರ ಹಲವು ದಿನಗಳ ಬೇಡಿಕೆಯಾಗಿತ್ತು. ಪ್ರಸ್ತುತ ಅದು ಈಡೇರುತ್ತಿದೆ ಎಂದರು.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಬಿ.ಕಣಬೂರು ಗ್ರಾಪಂ ಅಧ್ಯಕ್ಷ ರವಿಚಂದ್ರ, ತಹಸೀಲ್ದಾರ್ ತನುಜಾ ಟಿ.ಸವದತ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರುಬೈಲು ನಟರಾಜ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನ್ೀ, ಗ್ರಾಪಂ ಉಪಾಧ್ಯಕ್ಷೆ ರಂಜಿತಾ, ಸದಸ್ಯರಾದ ಮಹಮ್ಮದ್ ಜುಹೇಬ್, ಎಂ.ಎಸ್.ಅರುಣೇಶ್, ಬಿ.ಕೆ.ಮಧುಸೂದನ್, ಶಶಿಕಲಾ, ಸರಿತಾ, ಮಹೇಶ್ ಆಚಾರ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ, ಕಾಂಗ್ರೆಸ್ ವಕ್ತಾರ ಹಿರಿಯಣ್ಣ, ನಾಡಕಚೇರಿ ಉಪ ತಹಸೀಲ್ದಾರ್ ಹೇಮಾ ಮತ್ತಿತರರಿದ್ದರು